ಕೈ ವೈಫಲ್ಯ ವಿರುದ್ಧನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಫೆ. ೬- ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಸಜ್ಜಾಗಿರುವಾಗಲೇ ಸೇರಿಗೆ ಸವಾಸೇರು ಎಂಬಂತೆ ಬಿಜೆಪಿ ಶಾಸಕರು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ನಾಳೆ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ.
ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು ನಾಳಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನದಂಗೌಡ, ಜಗದೀಶ್‌ಶೆಟ್ಟರ್, ಬಸವರಾಜಬೊಮ್ಮಾಯಿ ಸಹ ನಾಳಿನ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂಣ ವಿಫಲವಾಗಿದೆ. ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ನಾಳೆ ಬಿಜೆಪಿ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ. ನಾಳಿನ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಎಲ್ಲ ಶಾಸಕರಿಗೂ ಸಂದೇಶ ಕಳುಹಿಸಲಾಗಿದೆ. ಹಾಗೆಯೇ ಬಿಜೆಪಿ ಸಂಸದರಿಗೂ ನಾಳಿನ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂಬ ಸಂದೇಶ ಕಳುಹಿಸಲಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುವ ದಿನವೇ ನಾಳೆ ರಾಜ್ಯದಲ್ಲಿ ಬಿಜೆಪಿ ಈ ಪ್ರತಿಭಟನೆ ಹಮ್ಮಿಕೊಂಡಿದೆ.