ಕೈ ಹಿಡಿದ ಕರಡಿ ಸಂಗಣ್ಣ

(ಸಂಜೆವಾಣಿ ಪ್ರತಿನಿಧಿಯಿಂದ)
ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್‌ರವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವ ಶಿವರಾಜ್ ತಂಗಡಗಿ, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ , ಮತ್ತಿತರರು ಇದ್ದಾರೆ.

ಬೆಂಗಳೂರು,ಏ.೧೭:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ನಿನ್ನೆಯಷ್ಟೆ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳು ಕರಡಿ ಸಂಗಣ್ಣ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಇದೇ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ, ಮುಖಂಡರಾದ ದಾಸರಹಳ್ಳಿ ಕೃಷ್ಣಮೂರ್ತಿ, ಪತ್ರಕರ್ತೆ ಸ್ವಾತಿಚಂದ್ರಶೇಖರ್ ಸಹ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಡಿಕೆಶಿ ಮಾತು
ಪಕ್ಷ ಸೇರಿದ ಎಲ್ಲ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಪಕ್ಷದ ಪರವಾದ ಅಲೆ ಎದ್ದಿದೆ. ಇಡೀ ದೇಶದಲ್ಲೇ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂಬ ಪ್ರಚಾರ ಆಗಿದೆ ಎಂದರು.
ನಾನು ಮತ್ತು ಮುಖ್ಯಮಂತ್ರಿಗಳು ಚುನಾವಣಾ ಪ್ರಚಾರ ಮಾಡುತ್ತಿದ್ದೇವೆ. ಎಲ್ಲೆಡೆ ಕಾಂಗ್ರೆಸ್ ಪಕ್ಷದ ಅಲೆ ಎದ್ದಿರುವುದು ಕಾಣುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ ಬಿಜೆಪಿ ೧೪ ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ನೀಡಿಲ್ಲ. ಅವರು ಗೆಲ್ಲುವುದಿಲ್ಲ ಎಂದು ಟಿಕೆಟ್ ಕೊಟ್ಟಿಲ್ಲ. ಇದನ್ನೆಲ್ಲ ನೋಡಿದರೆ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲ್ಲ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದರು.
ದೇಶದಲ್ಲೇ ಕಾಂಗ್ರೆಸ್ ಪಕ್ಷದ ನೀತಿ ಸಿದ್ಧಾಂತ ಎಲ್ಲವನ್ನು ಮೆಚ್ಚಿ ಪಕ್ಷ ಸೇರುತ್ತಿದ್ದಾರೆ. ಕರಡಿ ಸಂಗಣ್ಣ ಅವರು ಸಹ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವೆಲ್ಲ ನೋಡಿದರೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದರು.
ಸಂವಿಧಾನ ಬದಲಾವಣೆಯ ಚರ್ಚೆಗಳೂ ನಡೆದಿವೆ. ಪ್ರಧಾನಿ ಮೋದಿ ಸಂವಿಧಾನ ಬದಲಿಸಲ್ಲ ಎಂದು ಹೇಳಿದ್ದರೂ ಈ ಹಿಂದೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದವರ ವಿರುದ್ಧ ಬಿಜೆಪಿ ಕ್ರಮಕೈಗೊಂಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನೇ ಇನ್ನೂ ಈಡೇರಿಸಿಲ್ಲ. ಹೀಗಾಗಿ ಯಾವ ನೈತಿಕತೆ ಮೇಲೆ ಬಿಜೆಪಿಯವರು ಮತ ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಮುಂದುವರೆಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ರದ್ದು ಮಾಡುತ್ತೇವೆ ಎಂದು ಈ ರೀತಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ ಗ್ಯಾರಂಟಿ ನಿಲ್ಲಲು ಜನ, ಕಾಂಗ್ರೆಸ್ ಪಕ್ಷ ಅವಕಾಶ ಕೊಡಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರ ಹೆಸರನ್ನು ಉಲ್ಲೇಖಿಸಿ ಡಿ.ಕೆ ಶಿವಕುಮಾರ್ ಭವಿಷ್ಯ ನುಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಹತಾಶೆಯಿಂದ ಬಿಜೆಪಿ -ಜೆಡಿಎಸ್ ನಾಯಕರು ಈ ರೀತಿ ಮಾತನಾಡುತ್ತಿದ್ದಾರೆ. ತಾಯಂದಿರ ಬಗ್ಗೆಯೂ ಅಪಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಚಿವರುಗಳಾದ ಲಕ್ಷ್ಮಣ ಸವದಿ, ಅಮರೇಗೌಡ ಬೈರಾಪುರ ಮತ್ತಿತರರು
ಉಪಸ್ಥಿತರಿದ್ದರು.