ಕೊರೊನಾ ಅವ್ಯವಹಾರ ನ್ಯಾಯಾಂಗ ತನಿಖೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೩೧- ಆರೋಗ್ಯ ಇಲಾಖೆಯಲ್ಲಿ ಕೊರೊನಾ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹೇಳಿದರು.ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿರುವ ಕೊರೊನಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.
ಕೊರೊನಾ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರಗಳನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ. ನ್ಯಾಯಾಂಗ ತನಿಖೆ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದರು.ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ಸಾರ್ವಜನಿಕ ಹಣ ದುರುಪಯೋಗದ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿ ತನಿಖೆಗೆ ಶಿಫಾರಸ್ಸು ಮಾಡಿದೆ. ಹಾಗಾಗಿ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸಲಿದ್ದೇವೆ ಎಂದು ಅವರು ಹೇಳಿದರು.
ಜಯನಗರ ಆಸ್ಪತ್ರೆಯ ಸ್ಥಿತಿಗತಿ, ಸಿಬ್ಬಂದಿ ವೈದ್ಯರ ಗೈರು ಹಾಜರು ಬಗ್ಗೆ ದೂರುಗಳು ಬಂದಿದ್ದವು. ವಿಧಾನಸಭೆಯಲ್ಲೂ ಈ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದೆ. ಅದರಂತೆ ಇಂದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ಆಸ್ಪತ್ರೆಗಳಿಗೂ ದಿಢೀರ್ ಭೇಟಿ ನೀಡಲಾಗುವುದು. ತಪ್ಪುಗಳಾಗಿದ್ದರೆ ಸರಿಪಡಿಸಲಾಗುವುದು. ಕರ್ತವ್ಯಲೋಪ ಎಸಗುವ ವೈದ್ಯರು, ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.