ಕೊರೊನಾ ಭೀತಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ಏ.15- ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ”ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳವರೆಗೆ ಕಾರ್ಯಕ್ರಮವನ್ನು ಮೂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.

ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೆ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಸೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ಭೇಟಿ ನೀಡಿ ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು.

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ  ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.

ಏ.21 ರಂದು ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಕಂದಾಯ ಸಚಿವರು
ರದ್ದುಪಡಿಸಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.