ಕೊರೊನಾ ಸಂದರ್ಭದಲ್ಲಿ ರಾಜಕೀಯ ಬೇಡ

ಕಲಬುರಗಿ:ಮೇ.21: 1250 ಕೋಟಿ ಮೊತ್ತದ ಆರ್ಥಿಕ ವಿಶೇಷ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲಾ ಶ್ರಮಿಕ ವಗರ್ದ ಜನತೆಯ ಸಂಕಷ್ಟಕ್ಕೆ ನೆರವಾಗಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಈ ಕೊರೊನಾ ಸಂದರ್ಭದಲ್ಲಿ ರಾಜಕೀಯ ಮಾಡದೇ ವಿರೋಧ ಪಕ್ಷದ ಎಲ್ಲಾ ನಾಯಕರು ಸಹಕರಿಸಿ ಕೋವಿಡ್ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ. ಹೂವು, ಹಣ್ಣು ಮತ್ತು ತರಕಾರಿ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯ ಧನ, ಆಟೋ, ಟ್ಯಾಕ್ಸಿ ಚಾಲಕರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ 3 ಸಾವಿರ ಸಹಾಯ ಧನ. ಕುಂಬಾರರು, ಚಮ್ಮಾರರು ಸೇರಿದಂತೆ 3.5 ಲಕ್ಷ ಜನರಿಗೆ61 ಕೋಟಿ ಹಣ ಮೀಸಲಿರಿಸಿ ಅವರ ಕುಟುಂಬ ನಿರ್ವಹಣೆಗೆ ಪ್ಯಾಕೇಜ್ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಕೊರೊನಾ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ, ತಿಂಡಿ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರಧಾನಮಂತ್ರಿ ಗರೀಬ ಕಲ್ಯಾಣ ಯೋಜನೆಯಡಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಮೇ, ಜೂನ್ ತಿಂಗಳಲ್ಲಿ ಉಚಿತವಾಗಿ ಪಡಿತರ ಧಾನ್ಯ ನೀಡಲಿದ್ದಾರೆ. 2500 ವೈದ್ಯರನ್ನು ಕೋವಿಡ್ ಚಿಕಿತ್ಸೆಗಾಗಿ ಮೂರು ದಿನದೊಳಗಾಗಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದು‌ ಸಮಂಜಸವಾಗಿದೆ ಎಂದು ತಿಳಿಸಿದ್ದಾರೆ. ಸಾಲ ಮರುಪಾವತಿ ಅವಧಿ ವಿಸ್ತರಿಸಿರುವುದು ರೈತರಿಗೆ, ವ್ಯಾಪಾರಸ್ಥರಿಗೆ, ಸಣ್ಣ ಉದ್ಯಮಿಗಳಿಗೆ ಅನುಕೂಲಕರವಾಗಿದೆ ಎಂದಿದ್ದಾರೆ.ರೈತರ ಸಂಕಷ್ಟಕ್ಕೆ ಧಾವಿಸಿರುವ ಮೋದಿ ಸರಕಾರ ಗೊಬ್ಬರದ ಮೇಲೆ ನೀಡುತ್ತಿದ್ದ ಸಬ್ಸಿಡಿಯನ್ನು ಒಂದೇ ಬಾರಿಗೆ ಶೇ. 1.40 ರಷ್ಟು ಹೆಚ್ಚಿಸಿದೆ. ಇದರಿಂದ 2400 ರೂ. ದೊರೆಯುತ್ತಿದ್ದ 1 ಬ್ಯಾಗಿಗೆ ಈಗ ಕೇವಲ 1200 ರೂ.ಲಭ್ಯವಾಗಲಿದೆ. ಇದರಿಂದ 15 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮೋದಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು ಸ್ವಾಗತಾರ್ಹವಾಗಿದೆ ಎಂದರು.