ಕೊರೊನಾ 2 ನೇ ಅಲೆ ಜಾಗ್ರತೆ ವಹಿಸಿ : ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ: ಕೊರೊನಾ ಎರಡನೇ ಅಲೆಯ ಆತಂಕ ಜಿಲ್ಲೆಗೂ ತಟ್ಟಿದ್ದು, ಈಗಾಗಲೇ ನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆಯು ಏರಿಕೆಯಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಸಾಕಷ್ಟು ಜಾಗ್ರತೆ ವಹಿಸಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಮಂಗಳವಾರ ಸಂಜೆ ಕೊರೊನಾ 2ನೇ ಅಲೆ ಜಾಗ್ರತೆ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕರಿಗೂ ಲಸಿಕೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಬೇಕು. ಲಸಿಕೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
ಲಸಿಕೆ ಪಡೆದರು ಸಾಕಷ್ಟು ಜನ ಆರೋಗ್ಯವಾಗಿದ್ದಾರೆ. 45 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಗರ ಹಾಗೂ ಗ್ರಾಮೀಣಾ ಭಾಗದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ 2ನೇ ಅಲೆಯ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು. ಜೊತೆಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್, ವ್ಯಕ್ತಿಗತ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ತಿಳಿ ಹೇಳಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಮಾತನಾಡಿ, ತಾಲ್ಲೂಕಿನಲ್ಲಿ ಈಗಾಗಲೇ 2 ನೇ ಅಲೆಯ ತನ್ನ ಪ್ರಭಾವವನ್ನು ಬೀರಿದೆ. ಇದುವರೆಗೂ 48 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 38 ಪ್ರಕರಣಗಳು ನಗರದಲ್ಲಿ ಪತ್ತೆಯಾಗಿವೆ. ಇದುವರೆಗೂ 27 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಹಾಸ್ಟೆಲ್ ನ 11 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಅವರನ್ನು ಹಾಸ್ಟೆಲ್ ನಲ್ಲಿಯೇ ಐಸೋಲೇಷನ್ ಮಾಡುವ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.
ಜೊತೆಗೆ ತಾಲ್ಲೂಕಿನಲ್ಲಿ 18 ಸಾವಿರ ಜನರಿಗೆ ಲಸಿಕೆಯನ್ನು ಹಾಕುವ ಗುರಿ ಹೊಂದಿದ್ದು, ಇದುವರೆಗೂ 10 ಸಾವಿರ ಜನರಿಗೆ ಲಸಿಕೆಯನ್ನು ಹಾಕಲಾಗಿದೆ. ಇನ್ನುಳಿದ 8 ಸಾವಿರ ಜನರು ಲಸಿಕೆಯ ಬಗ್ಗೆ ತಪ್ಪು ತಿಳುವಳಿಕೆಯಿಂದ ಆಸ್ಪತ್ರೆಗೆ ಬಂದು ವ್ಯಾಕ್ಸಿನ್ ತೆಗೆದುಕೊಳ್ಳುತ್ತಿಲ್ಲ. ಈ ಕೊರೊನಾ ಮಹಾಮಾರಿಯನ್ನು ತಡೆಗಟ್ಟಬೇಕಾದರೇ, ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕು. ಏಪ್ರೀಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತದೆ ಎಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಇಓ ಡಾ.ಡಿ.ಮೋಹನ್, ತಹಶೀಲ್ದಾರ್ ಯು.ನಾಗರಾಜ್, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ತಾಲ್ಲೂಕು ಆರೋಗ್ಯಾಧಿಕಾರಿ ರಾಘವೇಂದ್ರ, ಸಿಪಿಐ ಉದಯರವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.