ಕೊರೋನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಬೆಡ್‍ಗಳ ಮಾಹಿತಿ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

ವಿಜಯಪುರ, ಏ.21-ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳು ಕೋರೋನಾ ದೃಢಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ತಾಲೂಕು ಮಟ್ಟದಲ್ಲಿ ಸರಿಯಾದ ರೀತಿ ಚಿಕಿತ್ಸೆ ನೀಡಿ ಅವಶ್ಯಕವಿದ್ದರೆ ಮಾತ್ರ ಜಿಲ್ಲಾ ಆಸ್ಪತ್ರೆಯ ಸಹಾಯವನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲಿನಲ್ಲಿ ಇಂದು ಜಿಲ್ಲಾ ಮತ್ತು ತಾಲೂಕು ಮಟ್ಟದ ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ಕೋರೋನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಜಿಲ್ಲಾ ಆಸ್ಪತ್ರೆಯಿಂದ ಒಂದು ತಂಡವನ್ನು ರಚನೆ ಮಾಡಿಕೊಂಡು ಪ್ರತಿಯೊಂದು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸರ್ಕಾರದ ನಿಯಮದಂತೆ 50% ಬೆಡ್‍ಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಜನರಲ್ ಬೆಡ್, ಐಸಿಯು ಬೆಡ್.ಆಕ್ಸಿಜನಗಳು ಹಾಗೂ ವೆಂಟಿಲೇಟರ್‍ಗಳ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಪ್ರತಿನಿತ್ಯ ತೆಗೆದುಕೊಂಡ ಅಂಕಿಸಂಖ್ಯೆಗಳನ್ನು ತಂತ್ರಾಂಶದ ಮೂಲಕ ಪ್ರತಿಯೊಂದು ಆಸ್ಪತ್ರೆಗಳಲ್ಲಿ ದಾಖಲಾದ ಹಾಗೂ ಡಿಸ್ಚಾರ್ಜ್ ಆದ ಕೋರೋನಾ ಪ್ರಕರಣಗಳನ್ನು ತಂತ್ರಾಂಶದ ಮೂಲಕ ಅಂಕಿಸಂಖ್ಯೆಯನ್ನು ಪ್ರತಿದಿನ ದಾಖಲೆ ಇಡಬೇಕು ಹಾಗೂ ಸಂಬಂಧಪಟ್ಟ ವೆಬ್‍ಸೈಟ್ ಗಳಲ್ಲಿ ಪ್ರತಿದಿನ ಮಾಹಿತಿಯನ್ನು ದಾಖಲಿಸಬೇಕು ಎಂದು ತಿಳಿಸಿದರು.
ಬಡ ಜನರು ಖಾಸಗಿ ಆಸ್ಪತ್ರೆಗಳಿಗೆ ಪರದಾಡದ ರೀತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಖಾಸಗಿ ಆಸ್ಪತ್ರೆಗಳು ಹೆಚ್ಚು ದುಡ್ಡು ವಸೂಲಿ ಮಾಡದಂತೆ ನೋಡಿಕೊಳ್ಳಬೇಕು ಹೆಚ್ಚು ದುಡ್ಡು ವಸೂಲಿ ಮಾಡಿದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿದಿನ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.
ಮತ್ತೆ ಪುನಃ ಕೋವಿಡ್ ಸೆಂಟರ್‍ಗಳನ್ನು ಆರಂಭ ಮಾಡುವ ಅವಶ್ಯಕತೆ ಇರುವುದರಿಂದ ಮುಂದಿನ ದಿನಗಳಲ್ಲಿ ಸಭೆಯನ್ನು ಕರೆದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೋವಿಡ ಸೆಂಟರಗಳ ಆರಂಭ ಮಾಡುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಮೇಶ್ ಕಳಸದ್. ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಗೋವಿಂದರೆಡ್ಡಿ. ಜಿಲ್ಲಾಸ್ಪತ್ರೆಯ ಆರೋಗ್ಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.