ಕೊರೋನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ

ಕೆಜಿಎಫ್.ಏ.೨೦: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಹಲವು ಮುಂಜಾಗೃತ ಕ್ರಮಗಳನ್ನು ಜಾರಿಗೊಳಿಸಿದ್ದು, ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ವ್ಯವಸ್ಥಿತವಾಗಿ, ಪರಿಣಾಮಕಾರಿಯಾಗಿ ಮುಂಜಾಗೃತ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲು ಸಾರ್ವಜನಿಕರು ಸಂಪೂರ್ಣ ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಕೋರಿದ್ದಾರೆ.
ರಾಬರ್ಟ್‌ಸನ್‌ಪೇಟೆಯ ಎಂ.ಜಿ. ಮಾರುಕಟ್ಟೆ, ನಗರಸಭಾ ಬಸ್‌ನಿಲ್ದಾಣ, ಗಾಂಧಿ ವೃತ್ತ, ಪ್ರಿಚರ್ಡ್‌ರಸ್ತೆ ಮೊದಲಾದೆಡೆಗಳಲ್ಲಿ ನಗರ ಗಸ್ತು ನಿರ್ವಹಿಸಿ, ಕೊರೊನಾ ವೈರಸ್ ಹರುಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಲು, ಅಂಗಡಿಗಳ ಬಳಿ, ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ತಿಳುವಳಿಕೆ ನೀಡಿದರು.
ಅಲ್ಲದೆ, ಕಾನೂನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತಿದೆ. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿನ ಎಲ್ಲಾ ನಾಗರೀಕರು ಜವಾಬ್ದಾರಿಯುತವಾಗಿ ನಡೆದುಕೊಂಡು, ಅನಾವಶ್ಯಕ ಓಡಾಟಕ್ಕೆ ಆಸ್ಪದ ನೀಡಬಾರದು, ವಿನಾಕಾರಣ ವಾಹನಗಳಲ್ಲಿ ಓಡಾಡುವವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಸರ್ಕಾರದ ಆದೇಶಗಳಿಗೆ ಬದ್ದರಾಗಿ ಮನೆಯಲ್ಲಿಯೇ ಇದ್ದು ಸುರಕ್ಷಿತರಾಗಿರಲು ಅಥವಾ ಅವಶ್ಯಕತೆ ಇದ್ದಲ್ಲಿ ಮಾತ್ರ ಮಾಸ್ಕ್ ಧರಿಸಿ ಓಡಾಡಲು ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಕೋರಿದ್ದಾರೆ.
ಈ ಸಂದರ್ಭದಲ್ಲಿ ಎಸ್‌ಪಿ ಅವರೊಂದಿಗೆ ಡಿವೈಎಸ್ಪಿ ಬಿ.ಕೆ.ಉಮೇಶ್, ಸಿಪಿಐ ಕೆ.ನಾಗರಾಜ್, ಪಿಎಸ್‌ಐ ಶೃತಿ ಮತ್ತಿತರರು ಹಾಜರಿದ್ದರು.