ಕೊಲ್ಕತ್ತಾಗೆ ಶಾ ಭೇಟಿ ಟಿಎಂಸಿಗೆ ನಡುಕ

ಕೋಲ್ಕತಾ, ಡಿ.೧೯- ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಗಾಗಿ ಕೋಲ್ಕತಾಕ್ಕೆ ಶನಿವಾರ ಮುಂಜಾನೆ ಆಗಮಿಸಿದರು. ಶಾ ಭೇಟಿಯಿಂದ ಮುಖ್ಯಮಂತ್ರಿ ಮಮತಾ ನೇತ್ರತ್ವದ ಟಿಎಂಸಿಯಲ್ಲಿ ತಳಮಳ ಸೃಷ್ಟಿಯಾಗಿದೆ.
ಸಧ್ಯದಲ್ಲಿ ಎದುರಾಗಲಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷವನ್ನು ಸಜ್ಜುಗೊಳಿಸಲು ಈ ಭೇಟಿ ಮಹತ್ವ ಪಡೆದುಕೊಂಡಿದ್ದು ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ’ಗುರುದೇವ್ ಟ್ಯಾಗೋರ್, ಈಶ್ವರ ಚಂದ್ರ ವಿದ್ಯಾಸಾಗರ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಂತಹ ಮಹಾನ್ ವ್ಯಕ್ತಿಗಳ ಪುಣ್ಯಭೂಮಿಗೆ ನಾನು ತಲೆಬಾಗುತ್ತೇನೆ’ ಎಂದು ನುಡಿದಿದ್ದಾರೆ.

ಇಂದು ಅಮಿತ್ ಶಾ ಅವರು ಮಿಡ್ನಾಪುರ್‌ದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಟಿಎಂಸಿಎ ಅನೇಕ ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ಪ್ರತಿ ತಿಂಗಳೂ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ನಾಯಕರು ತೆರಳುತ್ತಿದ್ದ ಕಾರಿನ ಮೇಲೆ ದಾಳಿ ನಡೆದ ಪ್ರಕರಣ ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಳಿಕ ಗೃಹ ಸಚಿವ ಅಮಿತ್ ಶಾ ಈಗ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಮುಖ್ಯವಾಗಿ ಅಮಿತ್ ಶಾ ಭೇಟಿ ಬಿಜೆಪಿಯಲ್ಲಿ ಹೊಸ ಬದಲಾವಣೆಗಳನ್ನು ತರುವ ಸಾಧ್ಯತೆ ಇದ್ದು, ಮಮತಾ ಬ್ಯಾನರ್ಜಿ ವಿರುದ್ಧ ಬಂದಾಯವೆದ್ದು ರಾಜೀನಾಮೆ ನೀಡಿರುವ ತೃಣಮೂಲ ಕಾಂಗ್ರೆಸ್ ಶಾಸಕ ಸುವೇಂದು ಅಧಿಕಾರಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.