ಕೋಟ್ಪಾ ಕಾಯ್ದೆ-೨೦೦೩ರ ಉನ್ನತ ಅನುಷ್ಠಾನ ಜಿಲ್ಲೆಯಾಗಿ ದ.ಕ ಜಿಲ್ಲೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ

ಮಂಗಳೂರು, ಮಾ.೩೧- ಯುವಜನರು ತಮ್ಮ ಜೀವನವನ್ನು ಕಾಪಾಡಿಕೊಳ್ಳಬೇಕೆಂದರೆ ತಂಬಾಕು ಸೇವನೆಯಿಂದ ದೂರವಿರಬೇಕು ಹಾಗೂ ಕೋಟ್ಪಾ ಕಾಯ್ದೆ-೨೦೦೩ ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಜಿಲ್ಲೆಯನ್ನು ತಂಬಾಕು ಸೇವನೆಯಿಂದ  ಮುಕ್ತವಾಗಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ತಿಳಿಸಿದರು.

ಅವರು ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಂಬಾಕು ನಿಯಂತ್ರಣ ಘಟಕದ ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ ಯೆಂದು ಘೋಷಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯು ೨೦೧೫ ರಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದು, ಈ ಹಿಂದೆ  ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯನ್ನು ರಚಿಸಿ ತ್ರೈಮಾಸಿಕ ಸಭೆಗಳನ್ನು ನಡೆಸಿ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗಿತ್ತು ಎಂದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಪಾ ಸೆಕ್ಷನ್-೪ ರಂತೆ ಧೂಮಪಾನ ನಿಷೇಧಿತ ಪ್ರದೇಶ ಎಂಬ ನಾಮಫಲಕವನ್ನು ಅಳವಡಿಸಲಾಗಿದೆ ಹಾಗೂ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ನಿಷೇಧದ ಬಗ್ಗೆ ಕ್ರಮ ವಹಿಸಲಾಗಿದೆ ಎಂದರು.

ಕಳೆದ ಎರಡು ವರ್ಷಗಳಲ್ಲಿ ಒಟ್ಟು ೧೧೯೭ ಪ್ರಕರಣಗಳನ್ನು ದಾಖಲಿಸಿ, ೧.೭೩.೦೨೦ ರೂಪಾಯಿ ದಂಡ ಹಾಕಲಾಗಿದ್ದು, ೫೦೦ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ೧೮೨೨ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಎಂದು ಘೋಷಿಸಲಾಗಿದ್ದು, ವೆನ್‌ಲಾಕ್ ಜಿಲ್ಲಾಸ್ಪತ್ರೆಯಲ್ಲು ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಲಾಗಿದೆ ಎಂದ ಅವರು,  ಕಳೆದ ಎರಡು ವರ್ಷಗಳಲ್ಲಿ ೧೬೫೦ ತಂಬಾಕು ವ್ಯಸನಿಗಳಿಗೆ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆಯನ್ನು ಉಚಿತವಾಗಿ ನೀಡಲಾಗಿದೆ ಎಂದರು.

ಬೀದಿ ನಾಟಕ, ಗೋಡೆ ಬರಹ ಮುಂತಾದ ಮಾಹಿತಿ, ಶಿಕ್ಷಣ, ಸಂವಹನ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ನಡೆಸಿ ಜನಜಾಗೃತಿ ಮೂಡಿಸಿದ್ದು, ಕೋಟ್ಪಾ-೨೦೦೩ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಅಧಿಕಾರಿಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೋಟ್ಪಾ ಕಾಯ್ದೆಯ ಅನುಷ್ಠಾನಕ್ಕೆ ಶ್ರಮಿಸಿದ ಇಲಾಖೆಯ ಅಧಿಕಾರಿಗಳಿಗೆ ಅಭಿನಂದಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ಸಾರ್ವಜನಿಕ ಶಿಕ್ಷನ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೋ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಮಂಜೇಶ್ ಶೆಟ್ಟಿ, ಅಬಕಾರಿ ಅಧೀಕ್ಷಕರಾದ ಗೀತಾ.ಪಿ, ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.