ಕೋತಿತೋಪು ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

ತುಮಕೂರು, ಏ. ೩- ನಗರದ ಕೋತಿತೋಪು ಪ್ರಾಥಮಿಕ ಆರೋಗ್ಯ ಕೇಂದ್ರ ಉತ್ತಮ ಸೇವೆ ಸಲ್ಲಿಸುವ ಮೂಲಕ ರಾಜ್ಯ ಸರ್ಕಾರದ ವತಿಯಿಂದ ನೀಡುವ ಕಾಯಕಲ್ಪ ಪ್ರಶಸ್ತಿ ಪಡೆದಿದೆ.
ರಾಜ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇತ್ತೀಚೆಗೆ ನಗರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರಗಳಲ್ಲಿ ನೀಡುವ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ ನಗರದ ಕೊತಿತೋಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಉತ್ತಮ ಸೇವೆ, ಸ್ವಚ್ಛತೆಗೆ ಹೆಚ್ಚು ಆದ್ಯತೆ, ಮೆಡಿಕಲ್ ತ್ಯಾಜ್ಯಗಳ ವಿಲೇವಾರಿ, ವಿವಿಧ ಲಸಿಕೆಗಳ ನೀಡುವಿಕೆ, ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ, ರೋಗಿಗಳೊಂದಿಗೆ ಉತ್ತಮ ಒಡನಾಟ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವಲ್ಲಿ ಕೋತಿತೋಪು ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಚೂಣಿಯಲ್ಲಿರುವ ಮೂಲಕ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಮಹೇಶ್ ಮಾತನಾಡಿ, ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಸಂದ ಉತ್ತಮ ಪ್ರಶಸ್ತಿ. ಇದಕ್ಕೆ ಸ್ಪಂದಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.