ಕೋಲಾರಕ್ಕೆ ಬಿ.ಎಲ್.ಸಂತೋಷ್ ಭೇಟಿ

ಕೋಲಾರ, ಜ,೨೦- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗುರುವಾರ ನಗರಕ್ಕೆ ಭೇಟಿ ನೀಡಲಿದ್ದು, ಬೂತ್ ಸಂಕಲ್ಪ ಅಭಿಯಾನ ಸಂಬಂಧ ಪಕ್ಷದ ಬೂತ್ ಸಮಿತಿ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ನಗರದ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೧.೩೦ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಅದಕ್ಕೂ ಮುನ್ನ ಬೆಳಿಗ್ಗೆ ೯.೩೦ಕ್ಕೆ ಜಿಲ್ಲಾ ಗಡಿ ಪ್ರದೇಶವಾದ ರಾಮಸಂದ್ರದಲ್ಲಿ ಸಂತೋಷ್ ಅವರಿಗೆ ಸ್ವಾಗತ ಕೋರಿ ಮೆರವಣಿಗೆಯಲ್ಲಿ ಕರೆತರಲಾಗುವುದು. ಸುಮಾರು ನಾಲ್ಕೈದು ಸಾವಿರ ಜನ ಸೇರಲಿದ್ದಾರೆ ಎಂದು ಹೇಳಿದರು.
ರಾಜ್ಯದಾದ್ಯಂತ ಜ.೨೧ ರಿಂದ ೨೯ ರವರೆಗೂ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ದೇಶದದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಈ ನಿಟ್ಟಿನಲ್ಲಿ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿರುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ೧೫೦ಕ್ಕೂ ಅಧಿಕ ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೋಲಾರ, ಕೆಜಿಎಫ್, ಮಾಲೂರು, ಬಂಗಾರಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ ಎಂದರು.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ತೋಡೊ ಯಾತ್ರೆಯಾಗಿದೆ. ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಮಹಿಳಾ ಸಮಾವೇಶಕ್ಕೆ ಬ್ಯಾಂಕ್‌ನ ಸಾಲಮನ್ನಾ ಮಾಡುವ ಆಮಿಷವೊಡ್ಡಿ ಮಹಿಳೆಯರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಯಾರೂ ಸ್ವಯಂ ಪ್ರೇರಿತರಾಗಿ ಹೋಗಿಲ್ಲ ಎಂದು ವ್ಯಂಗ್ಯವಾಡಿದರು.
ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯತ್ವ ಮಾಡಿಸಿದ ಪಕ್ಷ ಬಿಜೆಪಿಯಾಗಿದ್ದು, ಮುಂಬರುವ ದಿನಗಳಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೂ ಚಾಲನೆ ನೀಡಲಾಗುವುದು, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೂರು ಕಡೆಗಳಲ್ಲಿ ಸ್ಥಳವನ್ನು ಗುರುತಿಸಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್, ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಬಿಜೆಪಿ ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ವಕ್ತಾರ ಎಸ್.ಬಿ.ವೆಂಕಟಮುನಿಯಪ್ಪ, ರಾಜೇಶ್ ಸಿಂಗ್, ಸುರೇಶ್ ನಾರಾಯಣ್ ಇದ್ದರು.