ಕೋವಿಡ್‌ಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಮೀಸಲಿಡಿ

ದಾವಣಗೆರೆ,ಏ.೨೧: ಕೊರೊನಾ ಎರಡನೇ ಅಲೆ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಮೀಸಲು ಇಡಬೇಕು ಎಂದು ಜಿಲ್ಲಾ  ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಕಾಯ್ದಿರಿಸದ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ನಿನ್ನೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ರಾತ್ರಿ ೯ರಿಂದ ಬೆಳಿಗ್ಗೆ ೬ ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ಘೋಷಿಸಿದೆ. ಅಲ್ಲದೆ, ವಾರಾಂತ್ಯದ ಶನಿವಾರ ಮತ್ತು ಭಾನುವಾದಂದು ಲಾಕ್‌ಡೌನ್ ಜಾರಿ ಮಾಡಿದೆ. ಇದರ ಸಾಧಕ-ಬಾಧಕ ನೋಡಿಕೊಂಡು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದು, ಅವರ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದರು.ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೆಚ್ಚು ಆಸಕ್ತಿ ವಹಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದೆ. ಕೊರೊನಾ ಲಸಿಕೀಕರಣದ ಬಗ್ಗೆ ಮಾಹಿತಿ ಪಡೆಯಲಾಗಿದೆ. ರಾಜ್ಯದಲ್ಲಿ ೩೦ ಸಾವಿರ ಡೋಸ್ ಕೋವಿಡ್ ವ್ಯಾಕ್ಸಿನ್ ದಾಸ್ತಾನಿದ್ದು, ಶೀಘ್ರದಲ್ಲಿಯೇ ಇನ್ನೂ ೭೦ ಸಾವಿರ ಡೋಸ್ ಬರಲಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಜೊತೆಗೆ ಸಾರ್ವಜನಿಕರ ಸಹಕಾರವೂ ಬೇಕಾಗಿದೆ ಎಂದು ಹೇಳಿದರು.ಬೆಂಗಳೂರಿನಲ್ಲಿ ಕೊರೊನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ೮ ವಲಯಗಳಲ್ಲಿ ತಲಾ ಒಬ್ಬೊಬ್ಬ ಸಚಿವರಿಗೆ ಸೋಂಕು ಹದ್ದುಬಸ್ತಿಗೆ ತರಲು ಜವಾಬ್ದಾರಿ ನೀಡಲಾಗಿದೆ. ನನಗೆ ಜವಾಬ್ದಾರಿ ನೀಡಿರುವ ಮಹಾದೇವಪರ ವಲಯದ ೧೮ ಖಾಸಗಿ ಆಸ್ಪತ್ರೆಗಳಲ್ಲಿ ೧೨ ಸಾವಿರ ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೊನಾ ತಡೆಯುವಲ್ಲಿ ವಿಫಲವಾಗಿದೆ ಎಂಬುದಾಗಿ ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ಜಾಗದಲ್ಲಿ ಇದ್ದಿದ್ದರೆ ಹಾಗೇ ಮಾತನಾಡುತ್ತಿರಲಿಲ್ಲ. ವಿಪಕ್ಷಗಳು ಅನಾವಶ್ಯಕವಾಗಿ ಟೀಕೆ ಮಾಡುವುದನ್ನು ಬಿಟ್ಟು, ಕೊರೊನಾ ನಿಯಂತ್ರಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು