ಕೋವಿಡ್‌ ಬಗ್ಗೆ ಭಯ ಬೇಡ, ಎಚ್ಚರಿಕೆ ಅಗತ್ಯ: ಸಚಿವ ಪೂಜಾರಿ

ಮಂಗಳೂರು, ಎ.೨೫- ರೂಪಾಂತರ ಕೊರೋನಾ ಸೋಂಕಿನ ಬಗ್ಗೆ ಜನರು ಆತಂಕಪಡದೆ ಎಚ್ಚರದಿಂದ ಇರಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದರಿಂದ ಕೊರೋನಾದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ನಿನ್ನೆ ಮಂಗಳೂರಿನ ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಇಂದಿನ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆ ಮತ್ತು 4 ತಾಲೂಕು ಆಸ್ಪತ್ರೆಗಳು, 6 ಸಮುದಾಯ ಆಸ್ಪತ್ರೆಗಳಲ್ಲಿ ಕೊರೋನಾ ಪೀಡಿತರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲಾಗುವುದು ಅಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಜಿಲ್ಲಾಡಳಿತಕ್ಕೆ ಮೀಸಲಿರಿಸಿದ್ದು, ಯಾವುದೇ ಸಂದರ್ಭದಲ್ಲಿ ರೋಗಿಗಳನ್ನು ದಾಖಲು ಮಾಡುವಲ್ಲಿ ಆತಂಕವಾಗದಂತೆ ಕಣ್ಗಾವಲು ಮಾಡಲು ಕೋವಿಡ್ ನಿರ್ವಹಣಾ ಸಮಿತಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿದೆ ಎಂದರು.