ಕೋವಿಡ್ ಎರಡನೆ ಅಲೆ ಹಿನ್ನೆಲೆ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಿಃ ಶಶಿಕಲಾ ಜೊಲ್ಲೆ

ವಿಜಯಪುರ, ಏ.23ಃ ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ನಿಗದಿತ ಪ್ರಮಾಣದ ಆಕ್ಸಿಜನ್ ಇರುವಂತೆ ನೋಡಿಕೊಳ್ಳುವ ಜೊತೆಗೆ ಕೋವಿಡ್ ಸೋಂಕಿತರಿಗೆ ಬೆಡ್‍ಗಳ ಕೊರತೆ ಮತ್ತು ನಿಗದಿತ ಲಸಿಕೆಯ ಕೊರತೆಯಾಗದಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಸಬಲೀಕರಣ ಹಾಗೂ ವಿಕಲಚೇತನರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿಡಿಯೋ ಸಭಾಂಗಣದ ಮೂಲಕ ಜಿಲ್ಲೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು ಕೋವಿಡ್ ಎರಡನೆ ಅಲೆ ಹಿನ್ನೆಲೆಯಲ್ಲಿ ಎಲ್ಲರೂ ಅವಶ್ಯಕ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ರೂಪಾಂತರ ಕೊರೊನಾ ವೈರಸ್ ಇದಾಗಿದ್ದು, ಯುವ ಜನತೆಗೂ ಅಪಾಯ ಒಡ್ಡುತ್ತಿದೆ. ಕಾರಣ ಮುಂದಿನ ದಿನಗಳಲ್ಲಿ ಬರಬಹುದಾದಂತಹ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಲು ಈಗಿನಿಂದಲೇ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಪ್ರಮಾಣದ ಆಕ್ಸಿಜನ್ ಇರುವಂತೆ ಮತ್ತು ಬೆಡ್ ಕೊರತೆಯಾಗದಂತೆ ನೋಡಿಕೊಳ್ಳಲು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇಂದಿನಿಂದ 6 ಕೋವಿಡ್ ಕೇರ್ ಸೆಂಟರ್‍ಗಳನ್ನು ಆರಂಭಿಸಲಾಗುತ್ತಿದೆ. ವಿಜಯಪುರ ನಗರದಲ್ಲಿ 2, ಪ್ರತಿ ತಾಲೂಕಿಗೆ ಒಂದರಂತೆ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ತಿಳಿಸಿದ ಅವರು ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರ ಆಕರಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರು ಅಲ್ಪೋಪಹಾರ, ಉಪಹಾರಕ್ಕಾಗಿ ರೋಗಿಗಳು ಹೊರಗೆ ಬಂದು ಹೋಗುತ್ತಿರುವ ಬಗ್ಗೆ ಹಾಗೂ ಹೊರಗಿನ ಅಡುಗೆ ಮೂಲಕ ಆಹಾರ ಪಡೆಯುತ್ತಿರುವ ಬಗ್ಗೆ ಶಾಸಕ ಅರುಣ ಶಹಾಪೂರ ಅವರು ಗಮನಕ್ಕೆ ತಂದಿದ್ದು, ಈ ಕುರಿತು ವಿಶೇಷ ಗಮನ ನೀಡಬೇಕು. ಮಹಾರಾಷ್ಟ್ರದಿಂದ ಬಂದಿರುವ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ರೋಗಿಗಳ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರೆತಯಾಗದಂತೆ ನೋಡಿಕೊಳ್ಳಬೇಕು. ಅವಶ್ಯಕತೆಯಿದ್ದಲ್ಲಿ ಪಾರದರ್ಶಕವಾಗಿ ಮೆರಿಟ್ ಆಧಾರದ ಮೇಲೆ ನೇಮಿಸಿಕೊಳ್ಳಬೇಕು. ತಾಲೂಕಾ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‍ಗಳ ಸೌಲಭ್ಯವಿದ್ದರೂ ಕೂಡ ತಾಂತ್ರಿಕ ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು, ಐಎಮ್‍ಎ ಸಂಸ್ಥೆಯಿಂದ ಅಥವಾ ಖಾಸಗಿ ಆಸ್ಪತ್ರೆಗಳ ಮೂಲಕ ವೆಂಟಿಲೇಟರ್‍ಗಳ ನಿರ್ವಹಣಾ ಸಿಬ್ಬಂದಿ ಪೂರೈಸಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಅವಶ್ಯಕ ಕ್ರಮಕೈಗೊಳ್ಳಲು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಎಂ.ಬಿ ಪಾಟೀಲ ಅವರು ಜಿಂದಾಲ್ ಮೂಲಕ ಶೇ.50 ರಷ್ಟು ಆಕ್ಸಿಜನ್ ಮಹಾರಾಷ್ಟ್ರಕ್ಕೆ ಪೂರೈಕೆಯಾಗುತ್ತಿರುವ ಬಗ್ಗೆ ಗಮನಕ್ಕೆ ತಂದಿದ್ದು, ಇಲ್ಲಿನ ವಿಶೇಷವಾಗಿ ಕರ್ನಾಟಕ ರಾಜ್ಯ ಹಾಗೂ ವಿಜಯಪುರಕ್ಕೆ ಬೇಡಿಕೆಗೆ ಅನುಗುಣವಾಗಿ ಆಕ್ಸಿಜನ್ ಮೊದಲು ಪೂರೈಕೆಯಾಗುವಂತೆ ಕೋರಿದ್ದು, ಈ ಕುರಿತು ಅವಶ್ಯಕ ಕ್ರಮಕೈಗೊಳ್ಳುವುದಾಗಿ ಸಚಿವರು ಸಭೆಗೆ ತಿಳಿಸಿದರು. ಅದರಂತೆ ಶಾಸಕ ಶಿವಾನಂದ ಪಾಟೀಲ ಅವರು ನಗರದ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಯ ಸದ್ಭಳಕೆಗೆ ಸೂಚಿಸಿದ್ದು, ಈ ಕುರಿತು ಗಮನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಅದರಂತೆ ಇತ್ತೀಚೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಿಕಿತ್ಸೆ ಸಿಗದೇ ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕುರಿತು ಸಹ ಅವರು ಗಮನಕ್ಕೆ ತಂದಿದ್ದು, ಜಿಲ್ಲಾಸ್ಪತ್ರೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿರುವ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಸತ್ಯಾಸತ್ಯತೆ ಬಗ್ಗೆ ವರದಿ ಸಹ ಸಲ್ಲಿಸುವಂತೆ ತಿಳಿಸಿದ ಸಚಿವರು ಆಸ್ಪತ್ರೆ ಸಿಬ್ಬಂದಿಯೊಬ್ಬರು ಕೂಡ ನಿಧನ ಹೊಂದಿದರಿಂದ ಈ ಕುರಿತು ಪರಿಶೀಲನಾ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮತ್ತು ಸ್ಥಿತಿಗತಿಗಳ ಬಗ್ಗೆ ದಿನಕ್ಕೊಮ್ಮೆ ಹಾಗೂ ಪ್ರತಿವಾರ ತಮಗೆ ಮಾಹಿತಿ ಒದಗಿಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವಿರುದ್ಧ ಅನೇಕ ದೂರುಗಳು ಬರುತ್ತಿದ್ದು, ಡಿಎಚ್‍ಒ ಅವರು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಸ್ವ್ಯಾಬ್ ಸಂಗ್ರಹ, ಕೋವಿಡ್ ಲಸಿಕಾ ಕಾರ್ಯಕ್ರಮ ತೀವ್ರಗೊಳಿಸಬೇಕು. ಸ್ವ್ಯಾಬ್ ವರದಿಗಳ ಫಲಿತಾಂಶ ತಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅವಶ್ಯಕತೆ ಇರುವ ಕಡೆ ಮೆಕ್ರೋ ಕಂಟೇನ್ಮೆಂಟ್ ವಲಯ ರಚನೆ ಕುರಿತು ಸೂಕ್ತ ಗಮನ ನೀಡುವಂತೆ ತಿಳಿಸಿದ ಅವರು ಲಸಿಕಾ ಕಾರ್ಯಕ್ರಮ ಶೇ.100 ರಷ್ಟು ಆಗುವಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ರೆಮಿಡಿಸಿವರ್ ಲಸಿಕೆ ಮಾನದಂಡದನ್ವಯ ಬಳಕೆಯಾಗಬೇಕು. ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಸಮನ್ವಯತೆ ಮತ್ತು ಸಮರ್ಪಕ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸದೆ ತಕ್ಷಣ ಚಿಕಿತ್ಸೆ ಒದಗಿಸಬೇಕು. ಜಿಲ್ಲಾಸ್ಪತ್ರೆ ಇನ್ನಷ್ಟು ಬಲಪಡಿಸಲು ಶಾಸಕ ಶಿವಾನಂದ ಪಾಟೀಲ ಅವರು ತಿಳಿಸಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಗಮನ ನೀಡಬೇಕು. ಸಿಬ್ಬಂದಿಗಳ ಕೊರತೆಯನ್ನು ನೀಗಿಸಿಕೊಳ್ಳಬೇಕು. ಹೋಮ್ ಐಸೋಲೇಶನ್ ಬಗ್ಗೆ ಗಂಭೀರ ರೀತಿಯಲ್ಲಿ ನಿಗಾ ಇಡುವಂತೆಯೂ ಸೂಚನೆ ನೀಡಿ ಸರ್ಕಾರದ ಮಾರ್ಗಸೂಚಿಗಳನ್ವಯ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿ, ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆಯೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಅವರು ಸೂಚನೆ ನೀಡಿದರು.
ಕುಡಿಯುವ ನೀರು-ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆ : ಸಚಿವರು ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ, ಮೇವಿನ ಮತ್ತು ಹೊಲಗದ್ದೆಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಕೊರೆತಯಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹಾಗೂ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾತನಾಡಿ ಈ ಬಾರಿ ಟ್ಯಾಂಕರ್ ಮೂಲಕ ಇನ್ನುವರೆಗೆ ನೀರು ಪೂರೈಕೆ ಮಾಡುತ್ತಿಲ್ಲ. ಕೆರೆಗಳ ಭರ್ತಿಗೆ ಕ್ರಮಕೈಗೊಂಡಿದೆ. ಆಲಮಟ್ಟಿಯಿಂದ ನಾರಾಯಣಪೂರ ಜಲಾಶಯಕ್ಕೆ ನೀರು ಪೂರೈಕೆ, ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೆ ನೀರು ಪೂರೈಕೆಯಾಗಲಿದೆ. 32 ವಾರಗಳ ವರೆಗೆ ಮೇವಿನ ಸಂಗ್ರಹ ಸಹ ಇದ್ದು, ಚಿಮ್ಮಲಗಿ ಮತ್ತು ಮುಳವಾಡ ಏತನೀರಾವರಿ ಮೂಲಕ ನೀರು ಸಹ ಪೂರೈಕೆಯಾಗಲಿದೆ ಎಂದು ತಿಳಿಸಿದರು.
ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಜಿ.ಪಂ ಅಧ್ಯಕ್ಷೆ ಶ್ರೀಮತಿ ಸುಜಾತಾ ಕಳ್ಳಿಮನಿ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ, ಶಾಸಕ ಶಿವಾನಂದ ಪಾಟೀಲ, ಎಂ.ಬಿ ಪಾಟೀಲ, ಅರುಣ ಶಹಾಪೂರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ಡಾ,ಔದ್ರಾಮ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.