ಕೋವಿಡ್ ಕಾಲದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಹೆಚ್ಚಳ

ಕಲಬುರಗಿ,ಜ.7-ಕೊರೊನಾ ಸಂಕಷ್ಟದ ಕಾಲದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಅಧಿಕವಾಗಿದ್ದು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹೆಚ್ಚಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳ ಸಹಾಯವಾಣಿ ನಿರ್ದೇಶಕರು, ಸಿಬ್ಬಂದಿಗಳಿಗೆ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಅಧೀಕ್ಷಕರು ಮತ್ತು ಮುಖ್ಯಸ್ಥರು/ ಸಿಬ್ಬಂದಿಗಳಿಗೆ ” ಬಾಲ ನ್ಯಾಯ ಕಾಯ್ದೆ”-2015″ರ ಕುರಿತು ಜಿಲ್ಲಾ ಪಂಚಾಯತಿ ನೂತನ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿಯೂ ಹಾಲು, ಮೊಟ್ಟೆ ಸೇರಿ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಬೇಕಾದ ಎಲ್ಲ ಸವಲತ್ತುಗಳನ್ನು ಸರ್ಕಾರದಿಂದ ಒದಗಿಸಲಾಗಿದೆ. ಆದರೂ ಸಹ ಮಕ್ಕಳ ಹಕ್ಕುಗಳ ಉಲ್ಲಂಘನೆ ಹೆಚ್ಚಳವಾಗಿದ್ದು, ಇದಕ್ಕೆ ಕಾರಣವೇನು ?, ಎಲ್ಲಿ ತಪ್ಪಾಗಿದೆ ಎಂಬುವುದರ ಕುರಿತು ಚಿಂತನೆ ನಡೆಸಿ ಅದರನ್ನು ಸರಿಪಡಿಸುವ ಕೆಲಸ ಮಾಡಬೇಕಾಗಿದೆ ಎಂದರು.
@12bc =ಬಾಲ್ಯವಿವಾಹ ಮುಕ್ತ ಜಿಲ್ಲೆ
ಕಲಬುರಗಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. 2021ರ ಜನವರಿಯಿಂದ 2022ರ ಜನವರಿಯವರೆಗೆ ಜಿಲ್ಲೆಯಲ್ಲಿ ಒಂದೇ ಒಂದು ಬಾಲ್ಯವಿವಾಹ ಪ್ರಕರಣ ನಡೆಯದಂತೆ ನೋಡಿಕೊಳ್ಳಬೇಕು. ಅಂದಾಗ ಮಾತ್ರ ಮುಂದಿನ ವರ್ಷ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಸಂಘ ಸಂಸ್ಥೆಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.
@12bc =ಪ್ರೋತ್ಸಾಹ ಧನ
ಬಾಲ್ಯವಿವಾಹದ ಬಗ್ಗೆ ಮಾಹಿತಿ ನೀಡುವವರಿಗೆ ಪ್ರೋತ್ಸಾಹ ಧನ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಮಾಹಿತಿ ನೀಡುವವರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಇಲ್ಲಿಯೂ ಸಹ ಮಾಹಿತಿದಾರರಿಗೆ ಪ್ರೋತ್ಸಾಹ ಧನ ನೀಡುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುವೆ ಎಂದರು.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿಮ್ಸ್ ಆಸ್ಪತ್ರೆಯ ಇ.ಎನ್.ಟಿ.ವಿಭಾಗದ ಮುಖ್ಯಸ್ಥೆ ಡಾ.ರೇಣುಕಾ ಸತೀಶ್ ಅವರು ಮಾತನಾಡಿ, ಕೊರೊನಾದಿಂದಾಗಿ ಮಕ್ಕಳು ಕಳೆದೊಂದು ವರ್ಷದಿಂ ಮನೆಯಲ್ಲಿಯೇ ಇರುವುದರಿಂದ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಪಾಲಕರು, ಪೋಷಕರು ಮಕ್ಕಳ ಹಕ್ಕುಗಳ ರಕ್ಷಣೆಯ ಜೊತೆಗೆ ಅವರ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಸಿಸ್ಟರ್ ರೀನಾ ಡಿಸೋಜಾ ಅವರು ಮಾತನಾಡಿ, ಮಕ್ಕಳ ರಕ್ಷಣೆಯ ಜೊತೆಗೆ ಅವರ ಭವಿಷ್ಯವನ್ನು ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಭೀಮಸೇನ ಗುಡೂರ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಎಲ್.ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ನಿರ್ದೇಶಕರಾದ ಡಾ.ರೇಣುಕಾ ಗುಬ್ಬೆವಾಡ, ಡಾ.ಬಾಸ್ಕೋ ಸಂಸ್ಥೆ ನಿರ್ದೇಶಕ ಫಾದರ್ ಸಜೀ ಜಾರ್ಜ್, ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜ, ಬಾಲ ನ್ಯಾಯ ಮಂಡಳಿ ಸದಸ್ಯೆ ಗೀತಾ ಸಜ್ಜನಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ ವೇದಿಕೆ ಮೇಲಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತ ಕಾರ್ಯಕ್ರಮ ನಿರೂಪಿಸಿದರು.