ಕೋವಿಡ್ ನಿಯಂತ್ರಣಕ್ಕೆ ಅಗತ್ಯ ನೆರವು’ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಮೇ.೧: ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚಿಸಿದರು.ಅವರು  ಶಿವಮೊಗ್ಗ ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆ ಪರಿಶೀಲನೆ ನಡೆಸಿದರು.ಸಧ್ಯಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೋವಿಡೇತರ ರೋಗಿಗಳ ಚಿಕಿತ್ಸೆಗೆ ವೈದ್ಯರ ಕೊರತೆ ಉಂಟಾಗಿರುವುದಿಲ್ಲ. ಲಭ್ಯವಿರುವ ನರ್ಸ್‍ಗಳಿಂದ ಸಮರ್ಪಕವಾದ ಸೇವೆಯನ್ನು ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ವಿವಿಧ ವಿಭಾಗಗಳ ಮುಖ್ಯಸ್ಥರು ಕಡ್ಡಾಯವಾಗಿ ಪ್ರತಿದಿನ ಕರ್ತವ್ಯಕ್ಕೆ ಹಾಜರಾಗಬೇಕು. ವಿವಿಧ ವಾರ್ಡ್‍ಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ವೈದ್ಯರ ಹೆಸರನ್ನು ಆಯಾ ವಾರ್ಡ್ ಹೊರಗೆ ಪ್ರತಿದಿನ ಪ್ರಕಟಿಸಬೇಕು. ಕರ್ತವ್ಯ ಲೋಪ ಎಸಗುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ನರ್ಸ್‍ಗಳ ಸಮರ್ಪಕವಾಗಿ ನಿರ್ವಹಣೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಕರ್ತವ್ಯಕ್ಕೆ ನಿಯೋಜಿಸಲಾಗುವ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರತಿ ದಿನ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ಆದೇಶವನ್ನು ಉಲ್ಲಂಘಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಅಂತಹವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಅವರು ಮಾತನಾಡಿ, ಕೋವಿಡ್ ಪರೀಕ್ಷಾ ಫಲಿತಾಂಶ ವಿಳಂಬವಾಗುತ್ತಿರುವ ಕಾರಣ ಸಕಾಲದಲ್ಲಿ ಚಿಕಿತ್ಸೆ ಆರಂಭಿಸಲು ತೊಡಕಾಗುತ್ತಿದೆ. ಕೋವಿಡ್ ರೋಗಿಗಳ ವಾರ್ಡ್‍ಗೆ ಅವರ ಸಂಬಂಧಿಕರು ಯಾವುದೇ ಸುರಕ್ಷತಾ ಕಿಟ್ ಧರಿಸದೆ ನೇರವಾಗಿ ತೆರಳಲು ಅವಕಾಶ ನೀಡಬಾರದು. ಪಾಸಿಟಿವ್ ಬಂದ ವ್ಯಕ್ತಿಗಳ ಹೋಂ ಐಸೋಲೇಷನ್ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರು ಮಾತನಾಡಿ, ಲಸಿಕೆ ನೀಡುವ ವ್ಯವಸ್ಥೆಯನ್ನು ಸರಿಪಡಿಸಬೇಕು. ಲಸಿಕಾ ಕೇಂದ್ರಗಳ ಮುಂದೆ ಈಗಾಗಲೇ ಜನರು ಸಾಲುಗಟ್ಟಿ ನಿಲ್ಲುತ್ತಿದ್ದು, ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದನ್ನು ತಕ್ಷಣ ಸರಿಪಡಿಸಬೇಕು ಎಂದು ಹೇಳಿದರು.
ಕೋವಿಡ್ ಕಫ್ರ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಸಚಿವರು ಪೊಲೀಸರಿಗೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೇಯರ್ ಸುನಿತಾ ಅಣ್ಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.