ಕೋವಿಡ್ ನಿಯಂತ್ರಣಕ್ಕೆ ತಂಡ ರಚನೆ: ಜಿಲ್ಲಾಧಿಕಾರಿ

ಬಾಗಲಕೋಟೆ: ಮಾ26: ಕೋವಿಡ್ 2ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಗೆ ತಂಡ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಮುಖ್ಯವಾಗಿದೆ. ಇದರ ಪಾಲನೆ ನಗರ ಸ್ಥಳೀಯ ಸಂಸ್ಥೆ ಮತ್ತು ತಾಲೂಕಾ ಪಂಚಾಯತ್ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡಗಳು ಬಜಾರ, ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಅಂಗಡಿ ಮುಗ್ಗಟ್ಟುಗಳಲ್ಲಿ ಸಂಚರಿಸಿ ಮಾಸ್ಕ ಧರಿಸದಿದ್ದಲ್ಲಿ ನಗರ ಪ್ರದೇಶದವರಿಗೆ 250 ರೂ. ಹಾಗೂ ಗ್ರಾಮೀಣ ಪ್ರದೇಶದವರಿಗೆ 100 ರೂ.ಗಳ ದಂಡ ವಿಧಿಸಲಿದ್ದಾರೆಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಯಂತ್ರೋಪಕರಣಗಳ ಖರೀದಿ, ಬೆಡ್, ಕಾಟಾ, ಪಿಪಿಇ ಕಿಟ್, ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯ ಸಲರಕರಣೆ, ಊಟದ ವ್ಯವಸ್ಥೆ ಹಾಗೂ ಇತರೆ ಸೇರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿ ರೂ.ಗಳ ಖರ್ಚು ಮಾಡಲಾಗಿದೆ. ಈ ಬಗ್ಗೆ ಅಡಿಟ್ ಸಹ ಆಗಿರುವುದಾಗಿ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಹಾಕಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಅಲ್ಲದೇ 45 ರಿಂದ 59 ವರ್ಷದೊಳಗಿನವರಿಗೆ ಮಧುಮೇಹ ಮತ್ತು ರಕ್ತದ ಒತ್ತಡ ಇದ್ದವರು ಲಸಿಕೆ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಲಸಿಕೆ ಸಮಸ್ಯೆ ಇರುವದಿಲ್ಲ. ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಬಗ್ಗೆ ಮಾಹಿತಿ ಇದ್ದಲ್ಲಿ ಸಹಾಯವಾಣಿ ಸಂಖೆ 1077ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು.
ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ಸಾರ್ವಜನಿಕರಿಗೆ ನೆಗಟಿವ್ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ ಜರುಗಿಸಲಾಗುತ್ತಿದೆ. ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳಿಗೂ ಸಹ ಕೊವಿಡ್ ಲಸಿಕೆ ಹಾಕಲಾಗುತ್ತಿದೆ. ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಕುರಿತು ಸರಕಾರ ನಿಗದಿಪಡಿಸಿದ ಗುರಿಯನ್ನು ತಲುಪಲು ಕ್ರಮವಹಿಸಲಾಗಿದೆ. ಪ್ರಕರಣಗಳು ಹೆಚ್ಚಾದಲ್ಲಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲ ರೀತಿಯಿಂದ ಸಜ್ಜಾಗಿದೆ. ಅಲ್ಲದೇ ವಸತಿ ನಿಲಯಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ ಪ್ರಕರಣಗಳು ಹೆಚ್ಚಾದ ಪ್ರದೇಶಗಳಲ್ಲಿ ಸರಕಾರ ಮಾರ್ಗಸೂಚಿಯಂತೆ ಕಂಟೈನ್‍ಮೆಂಟ್ ಜೋನ್ ರಚಿಸಿ ಸದರಿ ಪ್ರದೇಶದ ಮೇಲುಸ್ತುವಾರಿಯಾಗಿ ಇನ್ಸಿಡೆಂಟ್ ಕಮಾಂಡರಗಳನ್ನು ನೇಮಿಸಿ ಸೂಕ್ತ ಕ್ರಮಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಉಪಸ್ಥಿತರಿದ್ದರು.