ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ

????????????????????????????????????

ಚಾಮರಾಜನಗರ, ಏ.30- ಎಲ್ಲಾ ವೈದ್ಯಕೀಯ ಸೌಲಭ್ಯಗಳು, ಕೋವಿಡ್ ಕೇರ್ ಕೇಂದ್ರಗಳ ಸಮರ್ಪಕ ಬಳಕೆ ಹಾಗೂ ಲಾಕ್ ಡೌನ್ ಅವಧಿಯಲ್ಲಿನ ಮಾರ್ಗಸೂಚಿಗಳ ಪಾಲನೆಗೆ ನಿಗಾ ವಹಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕ್ರಮ ತೆಗೆದುಕೊಳ್ಳುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಬೆಂಗಳೂರಿನಿಂದ ನಡೆದ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಬಳಿಕ ಕೋವಿಡ್ ನಿಯಂತ್ರಣ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗಬಾರದು. ಹಾಸಿಗೆಗಳು, ಆಮ್ಲಜನಕ, ವೆಂಟಿಲೇಟರ್ ಕೊರತೆಯಾಗಬಾರದು. ಔಷಧಿಗಳ ದಾಸ್ತಾನು ಮಾಡಿಕೊಂಡು ಕೋವಿಡ್ ಪ್ರಕರಣಗಳನ್ನು ಅತ್ಯಂತ ಮುತುವರ್ಜಿಯಿಂದ ನೊಡಿಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶವಾಗದಂತೆ ಸಮಪರ್ಕವಾಗಿ ಆರೈಕೆ, ಔಷದೋಪಚಾರ, ವೈದ್ಯಕೀಯ ಸೌಲಭ್ಯಗಳು ಲಭ್ಯವಾಗಬೇಕು ಎಂದರು.
ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ಕೋವಿಡ್ ಪರಿಕ್ಷೆಗೆ ಒಳಪಡಿಸುವ ಕಾರ್ಯ ನಿಗದಿತ ಸಮಯದೊಳಗೆ ನಡೆಸಬೇಕು. ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ವ್ಯಾಪಕವಾಗಿ ಹರಡದಂತೆ ವಹಿಸಬೇಕಿರುವ ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಲೇಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಸೋಂಕಿತರ ಚಿಕಿತ್ಸೆಗಾಗಿ ಕೋವಿಡ್ ಕೇಂದ್ರಗಳನ್ನು ಶೀಘ್ರವೇ ಸಜ್ಜುಗೊಳಿಸಬೇಕು. ಸೋಂಕು ಪ್ರಕರಣಗಳಿಗೆ ಅನುಗುಣವಾಗಿ ಕೋವಿಡ್ ಕೇರ್ ಕೇಂದ್ರಗಳು ಆಯಾ ಭಾಗದಲ್ಲಿಯೇ ಸೇವೆಗೆ ಸಿದ್ದವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಅಗತ್ಯವಿರುವ ವೈದ್ಯರು, ಸಿಬ್ಬಂದಿ ನಿಯೋಜನೆ ಮಾಡುವಂತೆ ಸಚಿವರು ಸೂಚಿಸಿದರು.
ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಅನುಷ್ಠಾನ ಮಾಡಲಾಗಿರುವ ಲಾಕ್ ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಲ್ಯಾಣ ಮಂಟಪಗಳು ಇನ್ನಿತರ ಸ್ಥಳಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆಯಾಗಬಾರದು. ಎಲ್ಲಾ ಕಡೆಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಅನಗತ್ಯ ಓಡಾಟಕ್ಕೆ ಅವಕಾಶ ಮಾಡಿಕೊಡಬಾರದು. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಅನುಸರಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಕಟ್ಟಡದ ಮೊದಲ ಎರಡು ಮಹಡಿಯಲ್ಲಿ ಕೋವಿಡ್ ಚಿಕಿತ್ಸಾ ಆಸ್ಪತ್ರೆ ಆರಂಭಿಸಲಾಗುತ್ತದೆ. ವೈದ್ಯಕೀಯ ಕಾಲೇಜು, ಗುಂಡ್ಲುಪೇಟೆ, ಹನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಾದಾಪುರದಲ್ಲಿರುವ ಪ್ರಥಮ ದರ್ಜೆ ಕಾಲೇಜು ಹಾಸ್ಟೆಲ್‍ನಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ಎಲ್ಲಾ ಸಿದ್ದತೆ ನಡೆಯುತ್ತಿದೆ. ಆಯಾ ಭಾಗದಲ್ಲೇ ಸೋಂಕಿತರಿಗೆ ಚಿಕಿತ್ಸೆ ಲಭ್ಯವಾಗಲಿದೆ. ಗಂಭೀರ ಪ್ರಕರಣಗಳಿಗೆ ಮಾತ್ರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮಾತನಾಡಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವವರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ರಥೋತ್ಸವ ಆಚರಿಸಲು ಮುಂದಾಗಿದ್ದವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟಾಗಿ ಅನುಷ್ಠಾನಕ್ಕೆ ತರಲು ಚೆಕ್ ಪೋಸ್ಟ್‍ಗಳನ್ನು ತೆರೆದು ತೀವ್ರ ನಿಗಾ ವಹಿಸಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ. ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಆರ್.ಸಿ.ಹೆಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗೂಡೂರು ಭೀಮಸೇನ, ಕೋವಿಡ್ ನಿಯಂತ್ರ ಸಂಬಂಧ ನಿಯೋಜನೆಗೊಂಡಿರುವ ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.