ಕೋವಿಡ್ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಮುಖ್ಯ: ಡಾ.ಬಿ.ವಿ ಗಿರೀಶ್

ಚಿತ್ರದುರ್ಗ,ಏಪ್ರಿಲ್17:
ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣದಲ್ಲಿ ಸಮದಾಯದ ಭಾಗವಹಿಸುವಿಕೆ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಜಿಂದಾಲ್ ಪ್ರೌಢಶಾಲೆಯಲ್ಲಿ ಶುಕ್ರವಾರ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಸ್ವಾಸ್ಥ್ಯ ಫೌಂಡೇಷನ್ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ, ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳ ಅಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಂತ್ರಣದಲ್ಲಿ ಸಮದಾಯದ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಅವರು ಮಾತನಾಡಿದರು.
45 ವರ್ಷ ಮೇಲ್ಪಟ್ಟ ಹಿರಿಯರಿಗೆ ಲಸಿಕೆ ಪಡೆಯಬೇಕು. ಕೆಮ್ಮು, ಶೀತ, ಜ್ವರ, ತಲೆನೋವು ಇರುವವರು ತಪ್ಪದೇ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು ಸಲಹೆ ನೀಡಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಈ ಬಾರಿಯ ವಿಶ್ವ ಆರೋಗ್ಯ ದಿನದ ಘೋಷವಾಕ್ಯ ನಂಬಿಕಾರ್ಹ, ಆರೋಗ್ಯಕರ ಜಗತ್ತನ್ನು ಕಟ್ಟುವುದು, ಕೋವಿಡ್ ಲಸಿಕೆ ನಂಬಿಕಾರ್ಹ, ಸಂಪೂರ್ಣ ಸುರಕ್ಷಿತವಾಗಿದೆ. ವದಂತಿಗಳಿಗೆ ಕಿವಿಕೊಡದೆ ಲಸಿಕೆ ಪಡೆದುಕೊಳ್ಳಿ ಎಂದು ಹೇಳಿದರು.
ಸ್ವಾಸ್ಥ್ಯ ಫೌಂಡೇಷ್‍ನ ಮೂರ್ಥಪ್ಪ ಮಾತನಾಡಿ, ಜಂತುಹುಳು ಮಾತ್ರೆಯನ್ನು ವರ್ಷಕ್ಕೆ 2 ಬಾರಿ ನುಂಗಬೇಕು. ಕ್ರಿಮಿ ಮುಕ್ತ ಭಾರತ ನಿರ್ಮಾಣ ಮಾಡೋಣ ಎಂದರು.
ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.