ಕೋವಿಡ್ ನಿಯಮಗಳನ್ನು ಪಾಲಿಸಿ:ಚರಂತಿಮಠ

ಬಾಗಲಕೋಟೆ: ಏ 3 : ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರು ಮತ್ತು ಶಾಸಕ ಡಾ.ವೀರಣ್ಣ ಚರಂತಿಮಠ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಕೋವಿಡ್ ಲಸಿಕಾ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಈ ಸಂದರ್ಭ ಮಾತನಾಡಿ ‘ಕೋವಿಡ್ ಎರಡನೆ ಅಲೆ ಮೊದಲಿಗಿಂತಲೂ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ನಿರ್ಲಕ್ಷಿಸಬಾರದು. ಸರ್ಕಾರ ಸೂಚಿಸುವ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಕೋವಿಡ್ ಎರಡನೆ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದು ಹೇಳಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ‘ಕೋವಿಡ್ ಲಸಿಕಾ ಕೇಂದ್ರ’ವನ್ನು ಸ್ಥಾಪಿಸಲಾಗಿದೆ. ಪ್ರತಿದಿನ ಗರಿಷ್ಠ 200 ಜನರಿಗೆ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸುಮಾರು 3000 ಜನರಿಗೆ ಲಸಿಕೆ ನೀಡಲಾಗಿದೆ. ಮೊದಲಹಂತದಲ್ಲಿ ಕೋವಿಡ್ ವಾರಿಯರ್ಸ್‍ಗೆ ಆದ್ಯತೆ ನೀಡಲಾಗಿತ್ತು. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಈ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಈ ಸಂದರ್ಭ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ.ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪುರ, ಡಾ.ಅಶೊಕ ಡೋರ್ಲೆ, ಡಾ.ಸೊಲಬನ್ನವರ, ಡಾ.ಕೋರಾ, ಡಾ.ನವೀನ ಚರಂತಿಮಠ ಮತ್ತಿತರ ವೈದ್ಯ ಪ್ರಮುಖರು ಉಪಸ್ಥಿತರಿದ್ದರು.