ಕೋವಿಡ್ ಮಾರ್ಗಸೂಚಿ ಪಾಲನೆ ಜತೆಗೆ ಮುತುವರ್ಜಿಯಿಂದ ಪರೀಕ್ಷೆ ನಡೆಸಿ

ಚಿತ್ರದುರ್ಗ,ಸೆ.೧೫; ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್16ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಜೊತೆಗೆ ಮುತುವರ್ಜಿಯಿಂದ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಇತರೆ ಎಲ್ಲ ಸಿಇಟಿ ಪರೀಕ್ಷೆಗಳಂತೆ ವಸತಿ ಶಾಲೆಗಳ ಪ್ರವೇಶಾತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು. ಈ ಪರೀಕ್ಷೆಗೆ 10 ರಿಂದ 11 ವರ್ಷದ ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಪರೀಕ್ಷೆ ನಡೆಯುವ ಎಲ್ಲ ಕೇಂದ್ರಗಳನ್ನು ಮುಂಚಿತವಾಗಿ ಸ್ಯಾನಿಟೈಸ್ ಮಾಡಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗೆ ತಾಕೀತು ಮಾಡಿದರು.
 ಪೊಲೀಸ್ ಬಂದೋಬಸ್ತ್, ಆರೋಗ್ಯ ಕಾರ್ಯಕರ್ತರ ನಿಯೋಜನೆ ಸೇರಿದಂತೆ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆಯ ವಿವಿಧ ಜವಾಬ್ದಾರಿಗಳನ್ನು ಯಾವುದೇ ಲೋಪದೋಷವಿಲ್ಲದಂತೆ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶೋಭಾ ಮಾತನಾಡಿ, ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11.00 ರಿಂದ 1.00 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ನಡೆಸುತ್ತಿದ್ದು, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಮಾರ್ಗಸೂಚಿಯಂತೆಯೇ ಪರೀಕ್ಷೆ ನಡೆಸಲು ಕ್ರಮವಹಿಸಬೇಕಿದೆ ಎಂದು ಹೇಳಿದರು. ಸಭೆಯಲ್ಲಿ ತಾಲ್ಲೂಕಿನ ತಹಶೀಲ್ದಾರ್‍ಗಳು, ಜಿಲ್ಲಾ ಖಜನಾಧಿಕಾರಿಗಳು, ಪೊಲೀಸ್, ನಗರಸಭೆ ಅಧಿಕಾರಿಗಳು ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಇದ್ದರು.