ಕೋವಿಡ್ ಮುಂಜಾಗ್ರತಾ ಕ್ರಮಗಳ ಮುಂದುವರಿಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ ಕಾವೇರಿ ಸೂಚನೆ

ಚಾಮರಾಜನಗರ, ಅ.29- ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮುಂಬರುವ ಚಳಿಗಾಲ ಸಂದರ್ಭದಲ್ಲಿಯೂ ಮತ್ತಷ್ಟು ಎಚ್ಚರಿಕೆಯಿಂದ ಮುಂದುವರೆಸುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೋವಿಡ್-19 ಸಂಬಂಧ ಕೈಗೊಂಡಿರುವ ಕ್ರಮಗಳು ಹಾಗೂ ಇತರೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಇರುವುದರಿಂದ ಈ ಸಂದರ್ಭದಲ್ಲಿ ಪ್ರಕರಣಗಳು ಉಲ್ಬಣಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಅನುಸರಿಸಲಾಗುತ್ತಿರುವ ಸಮರ್ಪಕ ಕ್ರಮಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಕಾವೇರಿ ಅವರು ತಿಳಿಸಿದರು.
ಸೋಂಕಿತರ ಪ್ರಮಾಣ ಹೆಚ್ಚಾಗದಂತೆ ನಿಗಾವಹಿಸಬೇಕಿದೆ. ಜನರಲ್ಲಿಯೂ ಜಾಗೃತಿ ಉಂಟು ಮಾಡಬೇಕಿದೆ. ಮುಂದೆ ಸೋಂಕಿನ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಆರೈಕೆಗಾಗಿ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿ ಅವರು ಯಾವುದೇ ಹೆಚ್ಚಿನ ತೊಂದರೆಯಾಗದ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪೂರ್ವ ಸಿದ್ದತೆಯೊಂದಿಗೆ ಪ್ರಕರಣಗಳ ನಿಯಂತ್ರಣಕ್ಕೆ ಮುಂದಾಗಬೇಕೆಂದು ಉಸ್ತುವಾರಿ ಕಾರ್ಯದರ್ಶಿ ಕಾವೇರಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಲು ಕೈಗೊಂಡಿರುವ ಕ್ರಮಗಳಿಗೆ ಪ್ರಶಂಸಿಸಿದ ಉಸ್ತುವಾರಿ ಕಾರ್ಯದರ್ಶಿ ಅವರು ಇದೇ ರೀತಿಯ ಕಾರ್ಯ ಕ್ಷಮತೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಜಿಲ್ಲಾಡಳಿತ, ವೈದ್ಯಕೀಯ ಸಿಬ್ಬಂದಿ ಹಾಗೂ ನೋಡಲ್ ಅಧಿಕಾರಿಗಳ ಕಾರ್ಯವನ್ನು ಅಭಿನಂದಿಸಿದರು.
ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಮಾತನಾಡಿ ಇತ್ತೀಚೆಗೆ ಸಂತೇಮರಹಳ್ಳಿಯಲ್ಲಿ 80 ಹಾಸಿಗೆ ಹಾಗೂ ಗುಂಡ್ಲುಪೇಟೆಯಲ್ಲಿ 50 ಹಾಸಿಗೆಗಳ ಸಾಮಥ್ರ್ಯ ಇರುವ ಡೆಡಿಕೇಟೆಡ್ ಕೋವಿಡ್ ಕೇರ್ ಸೆಂಟೆರ್ ಗಳನ್ನು ಆರಂಭಿಸಲಾಗಿದೆ. ಆಮ್ಲಜನಕ ವ್ಯವಸ್ಥೆಯನ್ನು ಸಹ ಸಮರ್ಪಕವಾಗಿ ಕೈಗೊಳ್ಳಲಾಗಿದೆ. ಕೋವಿಡ್ ಪರೀಕ್ಷೆ ಸಂಖ್ಯೆಯನ್ನೂ ಸಹ ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಜಿಲ್ಲಾಡಳಿತ ಮುಂದಾಗಿದೆ ಎಂದರು.
ಉಪವಿಭಾಗಾಧಿಕಾರಿ ಡಾ. ದಿಲೀಪ್ ಗಿರೀಶ್ ಬಡೋಲೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಸಂಜೀವ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಮುರಳೀಕೃಷ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಹೇಶ್, ಡಾ. ಸತೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.