ಕೋವಿಡ್ ಲಕ್ಷಣಗಳಿರುವವರು ಕೂಡಲೇ ತಪಾಸಣೆ ಮಾಡಿಸಿ:

ಚಿತ್ರದುರ್ಗ,ಜೂ.೨; ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಸೋಂಕು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಕೊರೊನಾ ಲಕ್ಷಣ ಕಂಡುಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು ಗ್ರಾಮದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು. ಮನೆಯಿಂದ ಹೊರಗಡೆ ಹೋಗುವಾಗ ಪ್ರತಿಯೊಬ್ಬರು ಮಾಸ್ಕ್ (ಮುಖಗವಸು) ಧರಿಸಬೇಕು ಎಂದರು.
 ಕೋವಿಡ್ ಸೋಂಕು ದೃಢಪಟ್ಟರೆ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಹಾಸ್ಟೆಲ್‍ಗಳಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಾಗಬೇಕು. ಆರಂಭಿಕ ಹಂತದಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಸಿದರೆ ಬೇಗ ಗುಣಮುಖರಾಗಬಹುದು ಎಂದು ಹೇಳಿದರು.
ಕೋವಿಡ್‍ಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಸೋಂಕು ಹರಡಲಿದೆ. ಹಾಗಾಗಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೋವಿಡ್-19 ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮಪಂಚಾಯಿತಿ ವ್ಯಾಪ್ತಿಯ ಆಲೂರು ಗ್ರಾಮದಲ್ಲಿ ಮಂಗಳವಾರ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕೋವಿಡ್-19 ಜಾಗೃತಿ ಮೂಡಿಸಿದರು