ಕೋವಿಡ್ ಲಸಿಕೆ ಜೀವ ರಕ್ಷಕ ಪಡೆಯಲು ಹಿಂಜರಿಯಬೇಡಿ

ದಾವಣಗೆರೆ ಮೇ26; ಕೋವಿಡ್-19 ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಹಾಗೂ ವಿಕಲ ಚೇತನರ ಆರೈಕೆದಾರರಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಪ್ರಬಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಕಲಚೇತನರಿಗೆ ಲಸಿಕೆ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಅಂಗವಿಲತೆ ಹೊಂದಿರುವ ವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಾಯ ಮಾಡುವಂತೆ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಲ್ಲಾ ವಿಕಲಚೇತನರಿಗೆ ಲಸಿಕೆ ಹಾಕಿಸಿಕೊಳ್ಳಲು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದ್ದೇವೆ.ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ತರು ಮತ್ತು ಅವರ ಆರೈಕೆದಾರರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಒಂದು ವೇಳೆ ಲಸಿಕಾ ಕೇಂದ್ರಕ್ಕೆ ಆಗಮಿಸಲು ಆಗದೆ ಇರುವಂತಹ ವಿಕಲಚೇತನರಿಗೆ ಮನೆ ಬಾಗಿಲಿಗೆ ಬಂದು ಲಸಿಕೆಯನ್ನು ಹಾಕಲಾಗುವುದು. ಅಂತಹವರು ಅಂಗವಿಕಲರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 263929 ಅಥವಾ 263936 ಕ್ಕೆ ಕರೆ ಮಾಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಿ.ಎಸ್. ಶಶಿಧರ್ ಪ್ರಾಸ್ತವಿಕವಾಗಿ ಮಾತನಾಡಿ, ಅಂಗವೈಕಲ್ಯದಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ವ್ಯಕ್ತಿಗಳ ಪ್ರಕರಣಗಳಲ್ಲಿ ಮನೆ ಬಾಗಿಲಿಗೆ ಲಸಿಕೆ ನೀಡಲಾಗುತ್ತದೆ. ಕೊರೊನಾ ಸೋಂಕು ತಡೆಗಟ್ಟಲು ಹೈಕೋರ್ಟ್ ನಿರ್ದೇಶನದ ಮೆರೆಗೆ ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್-19 ನಿಗ್ರಹ ಲಸಿಕೆಯನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿದಿನ ಲಸಿಕೆ ನೀಡಲಾಗುತ್ತಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರದ ನಗರದ ಮಹಾನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರವಣದೋಷವುಳ್ಳ ಮಂಜುನಾಥ್, ನಾಗರತ್ನ, ಸೌಮ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.