ಕೋವಿಡ್ ಸೋಂಕಿತರೊಂದಿಗೆ ತಾಳ್ಮೆಯಿಂದ ವರ್ತಿಸಿ: ಜಿಲ್ಲಾಧಿಕಾರಿ


ಗದಗ ಏ.26: ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಆಗಮಿಸುವ ಕೋವಿಡ್ ಸೋಂಕಿತರನ್ನು ವೈದ್ಯರು ತಾಳ್ಮೆ ಹಾಗೂ ಕಾಳಜಿಯಿಂದ ಕಾಣಬೇಕು. ಆಸ್ಪತ್ರೆ ಬರುವ ಕೋವಿಡೇತರ ಸಾಮಾನ್ಯ ರೋಗಿಗಳಿಗೂ ಚಿಕಿತ್ಸೆ ಪಡೆಯಲು ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕೋವಿಡ್ ನಿಯಂತ್ರಣ ವಿಡಿಯೋ ಸಂವಾದ ಸಭೆಯಲ್ಲಿ ತಾಲೂಕಾ ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ ಅವರು
ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಕೋವಿಡ್ ಸೋಂಕಿತ ವ್ಯಕ್ತಿಗಳ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಸರ್ಕಾರದ ಪ್ರಮಾಣಿಕೃತ ಮಾರ್ಗಸೂಚಿಗಳ ಅನುಸಾರವೇ ತಪಾಸಣೆ ನಡೆಸಿ ಔಷಧಿಗಳನ್ನು ನೀಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರಬೇಕು. ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ, ಹಾಸಿಗೆ ವ್ಯವಸ್ಥೆ, ಕುಡಿಯುವ ನೀರು, ಪಾರ್ಸ್‍ಲ್ ವ್ಯವಸ್ಥೆ ಮೂಲಕ ಊಟದ ಪೂರೈಕೆಗೆ ಅಗತ್ಯ ವ್ಯವಸ್ಥೆ, ವೈದ್ಯಕೀಯ ತ್ಯಾಜ್ಯಗಳ ವಿಲೇವಾರಿ, ಸ್ವಚ್ಛತೆ, ಕಸ ವಿಲೇವಾರಿ ಕುರಿತಂತೆ ಸೂಕ್ತ ಸಿಬ್ಬಂದಿ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.
ತಾಲೂಕಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್‍ಗಳ ದಾಸ್ತಾನುಗಳು, ರೆಮ್‍ಡಿಸಿವರ್, ಔಷಧಿಗಳ ದಾಸ್ತಾನು, ಐಸಿಯು ಘಟಕ, ವೆಂಟಿಲೇಟರ್ ವ್ಯವಸ್ಥೆ, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಹಾಗೂ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ರೋಗಿಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸೋಂಕಿತರ ಸಂಖ್ಯೆ ಅಧಿಕವಾದಲ್ಲಿ ತಾಲೂಕಿಗೊಂದರಂತೆ ಕೋವಿಡ್ ಕೇರ್ ಸೆಂಟರ್ ಆರಂಭಿಸಿ ಚಿಕಿತ್ಸೆ ಒದಗಿಸಬೇಕು. ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಮಾತನಾಡಿ, ನಿಯೋಜಿತ ನೋಡಲ್ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಆಸ್ಪತ್ರೆಗಳ ವ್ಯವಸ್ಥೆ ಹಾಗೂ ಸೋಂಕಿತರಿಗೆ ಚಿಕಿತ್ಸೆಗೆ ಅಗತ್ಯವಿರುವ ಔಷಧೋಪಕರಣಗಳ ಬಗ್ಗೆ ಕಾಲಕಾಲಕ್ಕೆ ಖುದ್ದು ಪರಿಶೀಲಿಸಬೇಕು. ಲಸಿಕಾಕರಣ ಪ್ರಕ್ರಿಯೆನ್ನು ತೀವ್ರಗೊಳಿಸುವ ಮೂಲಕ ಶೀಘ್ರವೇ ಜಿಲ್ಲೆಯ ಎಲ್ಲ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅನೀಲಕುಮಾರ ಮುದ್ದಾ, ಆರ್‍ಸಿಎಚ್ ಅಧಿಕಾರಿ ಡಾ.ಬಿ.ಎಂ.ಗೋಜನೂರ, ಡಿಎಸ್‍ಒ ಡಾ.ಜಗದೀಶ ನುಚ್ಚಿನ ಸೇರಿದಂತೆ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ತಾಲೂಕಾ ವೈದ್ಯಾಧಿಕಾರಿಗಳು ಇದ್ದರು.