ಕೋವಿಡ್ ಸೋಂಕು ತಗ್ಗಿಸಲು ಪರಿಣಾಮಕಾರಿ ಕಾರ್ಯಕ್ಕೆ ಸೂಚನೆ

ಚಾಮರಾಜನಗರ, ಮೇ. 26- ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ಸೌಲಭ್ಯಗಳು ಹಾಗೂ ಮುನ್ನೆಚರಿಕೆ ಕ್ರಮಗಳನ್ನು ಅನುಷ್ಠಾನ ಮಾಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವಹಿಸಲಾಗಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕು ವ್ಯಾಪಿಸದಂತೆ ತಡೆಯಲು ಅಧಿಕಾರಿಗಳು ವಿಶೇಷ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು. ರೋಗ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಆರಂಭದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ ನೀಡುವ ಕಾರ್ಯಗಳಿಗೆ ಹೆಚ್ಚು ನಿಗಾವಹಿಸುವ ಮೂಲಕ ಗಂಭೀರ ಸ್ಥಿತಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಯವರು ತಿಳಿಸಿದರು.
ಖಾಸಗಿ ಕ್ಲಿನಿಕ್‍ಗಳ ವೈದ್ಯರು ತಮ್ಮ ಬಳಿ ಬರುವ ಕೋವಿಡ್ ರೋಗ ಲಕ್ಷಣಗಳು ಇರುವವರಿಗೆ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು. ಕೋವಿಡ್ ಪರೀಕ್ಷೆ ಮಾಡಿಸದೇ ಚಿಕಿತ್ಸೆ ನೀಡಿ ಸೋಂಕು ಉಲ್ಬಣಗೊಂಡ ಬಳಿಕ ತಡವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸುವವರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಸಂಬಂಧಪಟ್ಟ ವೈದ್ಯರಿಗೆ ಎಚ್ಚರಿಕೆ ನೀಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಯವರು ನಿರ್ದೇಶನ ನೀಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ವ್ಯಾಪಕವಾಗಿ ಹರಡದಂತೆ ಇನ್ನಷ್ಟು ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು. ಕೋವಿಡ್ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಆಯಾ ಭಾಗದಲ್ಲಿಯೇ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಸೋಂಕಿತರನ್ನು ಪತ್ತೆಹಚ್ಚಿ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲು ಮಾಡಬೇಕು ಎಂದರು.
ಕೋವಿಡ್ ಮೂರನೇ ಅಲೆಯ ಪರಿಣಾಮಗಳನ್ನು ಎದುರಿಸುವ ಉದ್ದೇಶದಿಂದ ಎಚ್ಚರವಹಿಸಬೇಕು. ಇದಕ್ಕಾಗಿ ಮುಂಜಾಗ್ರತ ಕ್ರಮಗಳೊಂದಿಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕು, ಪ್ರಸ್ತುತ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಹಾಡಿ, ಕಾಡಂಚಿನ ಪ್ರದೇಶಗಳು ಸೇರಿದಂತೆ ಅರ್ಹರೆಲ್ಲರಿಗೂ ಕೋವಿಡ್ ಲಸಿಕೆ ಹಾಕುವ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಮಾತನಾಡಿ ಶೀತದಂತಹ (ಐ.ಎಲ್.ಐ) ಹಾಗೂ ಉಸಿರಾಟ (ಸಾರಿ) ಸಂಬಂಧಿ ತೊಂದರೆಯಿಂದ ಬಳಲುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಉದ್ದೇಶದಿಂದ ಮನೆ ಮನೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ಬಳಿಕವು ಪ್ರಕರಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ನಿರಂತರವಾಗಿ ನಿಗಾವಹಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕಾಧಿಕಾರಿ ಹರ್ಷಲ್ ಭೋಯರ್ ನಾರಾಯಣ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ, ಉಪವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ.ಸಂಜೀವ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು, ನೋಡಲ್ ಅಧಿಕರಿಗಳಾದ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಬಿ.ಆರ್.ಟಿ ವಲಯದ ನಿರ್ದೇಶಕರಾದ ಡಾ.ಸಂತೋಷ್ ಕುಮಾರ್, ಡಾ.ಮಹೇಶ್ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.