
ಹುಬ್ಬಳ್ಳಿ, ಆ ೨೭: ಕೋವಿಡ್ ಹಗರಣದ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತವಾದ ತನಿಖೆಯಾಗಬೇಕೆಂದು ನಮ್ಮ ಇಲಾಖೆಯಿಂದ ಸರ್ಕಾರಕ್ಕೆ ಬರೆದಿದ್ದು, ಈ ಸಂಬಂಧ ನ್ಯಾಯಮೂರ್ತಿ ಕುನ್ಹಾ ಅವರ ನೇತೃತ್ವದಲ್ಲಿ ಕೋವಿಡ್ ಹಗರಣದ ತನಿಖೆಗೆ ಆದೇಶ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ಮೇಲೆ ಕ್ರಮವಾಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳ ಸಂಖ್ಯೆ ಹೆಚ್ಚುತ್ತಿದ್ದು ಇದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು.ಜನರ ಮನೆಮನೆಗೆ ಆರೋಗ್ಯ ಸೇವೆ ತಲುಪಿಸಲು ಇಲಾಖೆಯಿಂದ ಮೊಬೈಲ್ ಮುನಿಟ್ ಆರಂಭಿಸಲಾಗುತ್ತಿದೆ. ಅದನ್ನು ಪ್ರಾಯೋಗಿಕವಾಗಿ ಎಂಟು ಜಿಲ್ಲೆಗಳಲ್ಲಿ ಆರಂಭಿಸಿ ಮುಂಬರುವ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.
ಇದಕ್ಕಾಗಿ ೭೦ ವಾಹನಗಳನ್ನು ಖರೀದಿಸಲಾಗುತ್ತಿದ್ದು ತಿಂಗಳೊಳಗೆ ಅದರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.
ಇದೇ ದಿ. ೩೦ ರಂದು ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದೆ. ಆ ಸಂದರ್ಭದಲ್ಲಿ ಸರ್ಕಾರದ ೧೦೦ ದಿನಗಳ ಸಾಧನೆಯ ಪುಸ್ತಕ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.ಸಚಿವರಾದ ಬಳಿಕ ಇಂದು ತಾವು ಮೊದಲ ಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದು ಮುಂಬರುವ ದಿನಗಳಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಲ್ಲದೇ ಕುಂದು ಕೊರತೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಅವರು ನುಡಿದರು.