ಕೋವಿಡ್ ಹಿನ್ನೆಲೆಯಲ್ಲಿ ಈಜುಕೋಳ, ಜಿಮ್ ಸೆಂಟರ್ ನಿಷೇಧ ಬೀದರ ಜಿಲ್ಲೆಯಲ್ಲೂ ಜಾರಿ: ರಾಮಚಂದ್ರನ್ ಆರ್

ಬೀದರ ಏ. 4: ಕೋವಿಡ್-19 ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾನ್ಯ ಮುಖ್ಯ ಕಾರ್ಯದರ್ಶಿಗಳು ಆದೇಶಿಸಿದಂತೆ ಜನಹಿತ ದೃಷ್ಟಿಯಿಂದಾಗಿ ಬೀದರ ಜಿಲ್ಲೆಯಲ್ಲಿ ಕೂಡ ಈಜುಕೊಳ, ಜಿಮ್ ಸೆಂಟರಗಳ ನಿಷೇಧ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದರು.
ಏಪ್ರಿಲ್ 3ರ ಸಂಜೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ನಿರ್ದೇಶನದಂತೆ, ಬೀದರ ಜಿಲ್ಲೆಯಲ್ಲಿ ಸಿನೇಮಾ ಮಂದಿರಗಳು ಕೂಡ ಕೋವಿಡ್ ನಿಯಮ ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಪಾಲನೆ ಮಾಡಿ ಚಿತ್ರ ಮಂದಿರಗಳು ನಡೆಯುವಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಮಾನ್ಯ ಮುಖ್ಯ ಕಾರ್ಯದರ್ಶಿಗಳು ತಿಳಿಸಿದಂತೆ ಬೀದರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ನೀಡಿಕೆ ಮತ್ತು ಕೋವಿಡ್-19 ಟೆಸ್ಟ್ ಗುರಿಯನುಸಾರ ಪ್ರಗತಿ ತೋರಲು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರದ್ಧೆ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ವೈದ್ಯಾಧಿಕಾರಿಗಳು ಹೋಮ್ ಕ್ವಾರಂಟೈನದಲ್ಲಿರುವವರ ಮೇಲೆ ತೀವ್ರ ನಿಗಾವಹಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳಿರುವವರು ಮತ್ತು ತೀವ್ರತರ ಶ್ವಾಸಕೋಶ ತೊಂದರೆ ಇದ್ದವರು ವಿಳಂಬ ಮಾಡದೇ ಗಂಟಲು ಮತ್ತು ಮೂಗಿನ ದ್ರವದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಿಎಚ್‍ಓ ಡಾ.ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕರಾದ ಡಾ.ಶಿವಕುಮಾರ ಹಾಗೂ ಇನ್ನಿತರರು ಇದ್ದರು.