ಕೋವಿಡ್ ೩ನೇ ಅಲೆ ಎದುರಿಸಲು ಕ್ರಮವಹಿಸಲು ಸೂಚನೆ

ಚಿತ್ರದುರ್ಗ,ಜ.೮-ಕೋವಿಡ್-೧೯ರ ಹೊಸ ರೂಪಾಂತರವಾದ ಓಮಿಕ್ರಾನ್‌ನೊಂದಿಗೆ ಕೋವಿಡ್ ವೈರಸ್‌ನ ಮೂರನೇ ಅಲೆ ಎದುರಿಸಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಮ್ಲಜನಕದ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಜನವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಹಾಸಿಗೆ ವ್ಯವಸ್ಥೆ, ಜೌಷಧಿ, ತಜ್ಞ ವೈದ್ಯರು, ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಕೋವಿಡ್-೧೯ರ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿನ ಲಕ್ಷಣಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಶಿಕ್ಷಣ ನೀಡಬೇಕು ಎಂದು ತಾಕೀತು ಮಾಡಿದರು.
ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ.ಶ್ರೀನಿವಾಸ್ ಮಾತನಾಡಿ, ಕೋವಿಡ್-೧೯ರ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಲಾಗಿದೆ. ಪ್ರಸ್ತುತ ಕೋವಿಡ್-೧೯ರ ೩ನೇ ಅಲೆಯು ಪ್ರಾರಂಭವಾಗಿದ್ದು, ಕೋವಿಡ್-೧೯ರ ನಿಯಂತ್ರಣಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಸಕಲ ಸಿದ್ಧತೆಗಳನ್ನುಕೈಗೊಳ್ಳಬೇಕು. ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ವೈದ್ಯರು, ಸಿಬ್ಬಂದಿ, ಹಾಸಿಗೆ ವ್ಯವಸ್ಥೆ, ಆಕ್ಸಿಜನ್ ಕೊರತೆ ಆಗದಂತೆ ಕ್ರಮವಹಿಸಬೇಕು. ಮುಖ್ಯವಾಗಿ ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ರೀತಿಯಲ್ಲಿಯೂ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.
ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮೊದಲ ಮತ್ತು ಎರಡನೇ ಅಲೆಯಲಿ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಸಾಕಷ್ಟು ದೂರುಗಳು ಬಂದವು ಆದರೆ ಈ ಬಾರಿ ಮೂರನೇ ಅಲೆಯ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆಗಳು ಆಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ಕೋವಿಡ್‌ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಕೋವಿಡ್ ಪರಿಹಾರ ಮೊತ್ತವನ್ನು ಕೂಡಲೇ ವಿತರಿಸಬೇಕು. ರಾಜ್ಯ ಸರ್ಕಾರದಿಂದ ರೂ.೧ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ ರೂ.೫೦ ಸಾವಿರ ಸೇರಿದಂತೆ ಒಟ್ಟು ೧.೫೦ ಲಕ್ಷ ಕೋವಿಡ್ ಪರಿಹಾರ ನೀಡಲಾಗುತ್ತಿದೆ ಎಂಬ ಮಾಹಿತಿ ಇದೆ. ಕೇಂದ್ರಸರ್ಕಾರದಿಂದ ಬರುವ ಕೋವಿಡ್ ಪರಿಹಾರ ಇನ್ನೂ ಬಂದಿಲ್ಲ ಎಂಬ ಮಾಹಿತಿ ಇದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯೂರು ತಹಶೀಲ್ದಾರ್ ಶಿವಕುಮಾರ್, ರಾಜ್ಯ ಸರ್ಕಾರದಿಂದ ನೀಡುವ ಕೋವಿಡ್ ಪರಿಹಾರ ಈಗಾಗಲೇ ಫಲಾನುಭವಿಗಳಿಗೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಇನ್ನೂ ಪರಿಹಾರ ನೀಡಿಲ್ಲ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಕೋವಿಡ್-೧೯ರ ಮೂರನೇ ಅಲೆಗೆ ಸಿದ್ಧತೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲಿಯೂ ಆಕ್ಸಿಜನ್ ಘಟಕ ಸಿದ್ಧವಿದೆ. ಹೊಳಲ್ಕೆರೆ ತಾಲ್ಲೂಕು ಆಕ್ಸಿಜನ್ ಘಟಕ ಇನ್ನು ಹತ್ತುದಿನಗಳಲ್ಲಿ ಸಿದ್ಧವಾಗಲಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ ಮಾತನಾಡಿ, ಕೋವಿಡ್ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ಕನಿಷ್ಟ ೧೦ ತಜ್ಞ ವೈದ್ಯರ ಅವಶ್ಯಕತೆ ತೀರಾ ಅಗತ್ಯವಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಹಾಗೂ ವಿವಿಧ ಇಲಾಖೆಯ ಜಿಲ್ಲಾಮಟ್ಟ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.