ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಡಿ,ಸಿ

ಜಿಲ್ಲಾ ಮಟ್ಟದ ಕೌಟುಂಬಿಕ ಹಿಂಸೆ ತಡೆ ಕಾಯ್ದೆ ಸಮಿತಿ ಸಭೆ
ರಾಯಚೂರು,ನ.೦೬- ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅನ್ಯಾಯಕ್ಕೊಳಗಾದವರಿಗೆ ಸೂಕ್ತ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
ಅವರು ನ.೫ರ(ಶನಿವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕೌಟುಂಬಿಕ ಹಿಂಸೆ ತಡೆ ಕಾಯ್ದೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತ್ಯಾಚಾರ, ಮಕ್ಕಳ ಅಪಹರಣ, ವ್ಯಕ್ತಿ ಸಾಗಾಣಿಕೆ, ವರದಕ್ಷಣೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗುತ್ತಿದ್ದು, ಪ್ರಕರಣಗಳನ್ನು ಸರಿಯಾದ ಮಾಹಿತಿಗಳೊಂದಿಗೆ ದಾಖಲಿಸಿಕೊಳ್ಳಬೇಕು.
ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಮೊದಲು ಇಲಾಖೆಯಿಂದ ಅವುಗಳನ್ನು ಇತ್ಯರ್ಥಪಡಿಸಬಹುದಾಗಿದ್ದಲ್ಲಿ ಇತ್ಯರ್ಥಪಡಿಸಬೇಕು, ಇಲ್ಲವಾದಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ್, ಶಿಶುಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.