ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಿ: ಸಚಿವ ಶರಣಪ್ರಕಾಶ್ ಪಾಟೀಲ್‍ರಿಗೆ ಮನವಿ

ಕಲಬುರಗಿ:ಫೆ.05: ನಗರದಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಕಲ್ಯಾಣ ನಾಡು ವಿಕಾಸ ವೇದಿಕೆಯ ಸಂಸ್ಥಾಪಕರೂ ಹಾಗೂ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್. ನಡಗೇರಿ ಅವರು ಒತ್ತಾಯಿಸಿದರು.
ನಗರದಲ್ಲಿ ಸಚಿವರಿಗೆ ನಿಯೋಗದ ಮೂಲಕ ಮನವಿ ಪತ್ರ ಸಲ್ಲಿಸಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ವಿಭಾಗದಲ್ಲಿನ ಬಡತನ, ವಲಸೆ ಮತ್ತು ನಿರುದ್ಯೋಗ ಸಮಸ್ಯೆಗಳು ನಿವಾರಣೆಯಾಗಿಲ್ಲ. ರಾಜ್ಯದ ಇತರೆ ವಿಭಾಗಗಳಿಗೆ ಹೋಲಿಸಿದರೆ ವಿಭಾಗದ ತಲಾ ಆದಾಯ, ನಿರುದ್ಯೋಗ ಪ್ರಮಾಣ, ವಲಸೆಯ ಪ್ರಮಾಣ ಮತ್ತು ಜನರು ಬಡತನ ರೇಖೆಗಿಂತ ಕೆಳಗೆ ಇರುವವರ ಪ್ರಮಾಣವು ಅಧಿಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಮ್ಮ ಭಾಗದ ಯುವಕರಿಗೆ ಕೌಶಲ್ಯದ ಕೊರತೆಯಿಂದ ನಿರುದ್ಯೋಗ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದೆ. ಬಡತನ, ವಲಸೆ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ನಿಯಂತ್ರಿಸಲು ನಗರದಲ್ಲಿ ಪ್ರಸ್ತುತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂದು ಅವರು ಮನವಿ ಮಾಡಿದರು.
ನಮ್ಮ ಭಾಗದ ಯುವ ಸಮುದಾಯದ ಉಜ್ವಲ ಭವಿಷ್ಯ ನಿರ್ಮಾಣ ಮತ್ತು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ದೇಶದಲ್ಲಿಯೇ ಅತೀ ಹಿಂದುಳಿದ ವಿಭಾಗೀಯ ಕೇಂದ್ರ ನಗರದಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಿದರೆ ಈ ಭಾಗದ ಯುವಕರು ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯುವ ಜೊತೆಗೆ ಉದ್ಯಮಿಗಳಾಗುತ್ತಾರೆ ಎಂದು ಅವರು ಹೇಳಿದರು.