ಕ್ರೀಡಾ ಕ್ಷೇತ್ರದ ಸಾಧನೆಗೆ ಮುಂದಾಗಲು ಮಹಿಳೆಯರಿಗೆ ಬಿ.ಎಸ್. ಭಾರತಿ ಸಲಹೆ


ಚಾಮರಾಜನಗರ: ಮಾ.09:- ಹೆಣ್ಣು ಮಕ್ಕಳು ಕ್ರೀಡೆಯ ಬಗ್ಗೆ ಹೆಚ್ಚು ಒಲವು ತೋರಬೇಕು. ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 19 ವರ್ಷದ ಹೆಣ್ಣುಮಕ್ಕಳ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಆಯೋಜಿಸಿರುವುದು ತುಂಬಾ ಖುಷಿಯಾದ ವಿಷಯವಾಗಿದೆ. ಮಕ್ಕಳು ಈ ರೀತಿಯ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಮುಂದೆ ಬರಬೇಕು. ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ನೀವೂ ಭಾಗವಹಿಸುವಂತಾಗಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಸಾಧನೆ ಮಾಡಬೇಕು. ಮಹಿಳೆಯರಿಗೆ ಕಾನೂನಿನ ಬಗ್ಗೆಯೂ ಹೆಚ್ಚು ಅರಿವು ಇರಬೇಕು. ಹಕ್ಕುಗಳ ಬಗ್ಗೆಯೂ ಜಾಗೃತಿ ಹೊಂದಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಎಲ್ಲರ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆಯ ಶುಭಾಶಯ ಕೋರಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ ಅವರು ಮಾತನಾಡಿ ಹೆಣ್ಣು ಮಕ್ಕಳು ಶ್ರಮವಹಿಸಿ ಓದಿ ವಿದ್ಯಾವಂತರಾಗಬೇಕು. ಉತ್ತಮ ಶಿಕ್ಷಣದಿಂದ ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯ. ಮಹಿಳೆಯರಿಗೆ ತುಂಬಾ ಅವಕಾಶಗಳು ಇದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಕುಟುಂಬದಲ್ಲಿ ಆಧಾರ ಸ್ತಂಭವಾಗಿ ನಿಲ್ಲಬಹುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಗೀತಾಲಕ್ಷ್ಮೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ, ಭೂ ದಾಖಲೆಗಳ ಉಪ ನಿರ್ದೇಶಕರಾದ ವಿದ್ಯಾಯಿನಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ಣಾಯಕ ಮೌಲ್ಯ ಮಾಪನ ಅಧಿಕಾರಿ ದೀಪಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.