
ಭಾಲ್ಕಿ:ಆ.26:ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ದೈಹಿಕ ಸದೃಢತೆ ಪಡೆದುಕೊಳ್ಳಬಹುದು ಎಂದು ಬಿಆರ್‍ಸಿ ಮನೋಹರ ಹೊಳ್ಕರ್ ಹೇಳಿದರು.
ತಾಲ್ಲೂಕಿನ ಹಲಬರ್ಗಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದರು.
ಸದೃಢವಾದ ಶರೀರದಲ್ಲಿ ಮಾತ್ರ ಆರೋಗ್ಯವಂತ ಮನಸ್ಸು ಇರುತ್ತದೆ. ಹಾಗಾಗಿ, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ ಫುಲೆ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾಭ್ಯಾಸದಷ್ಟೇ ಮಹತ್ವ ದೈಹಿಕ ಶಿಕ್ಷಣಕ್ಕೂ ಇದೆ. ಇದನ್ನರಿತು ಪಾಲಕರು, ಶಿಕ್ಷಕರು ಮಕ್ಕಳಿಗೆ ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಲು ಪ್ರೇರೇಪಿಸಬೇಕು ಎಂದು ಮಾರ್ಮಿಕ ಉದಾಹರಣೆ ಸಹಿತ ವಿವರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿಬಾಯಿ ಶಿವಪಾಲ್‍ಸಿಂಗ್ ಠಾಕೂರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಸೂರ್ಯಕಾಂತ ಸುಂಟೆ, ಟಿ.ಎಂ.ಕುಸುಮಾಕುಮಾರಿ, ಸೋಮನಾಥ ವರ್ಧಾ, ನಾಗೇಶ ಸೇರಿದಂತೆ ಇತರರು ಇದ್ದರು.