
ಕಲಬುರಗಿ:ನ.20: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವ ಲಕ್ಷಣಗಳು ಕ್ಷಯರೋಗದ್ದಾಗಿವೆ. ಆಗ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಕಾಯಿಲೆಯಿಂದ ಮುಕ್ತಿ ಹೊಂದಬೇಕು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು.
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ’್ರದ ವತಿಯಿಂದ ಜರುಗಿದ ‘ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ’ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಈ ಆಂದೋಲನವು ನ.15ರಿಂದ ಡಿ.2ರವರೆಗೆ ಜರುಗಲಿದ್ದು, ಟಿಬಿ ಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ, ಪರೀಕ್ಷೆ ಮಾಡಿ, ಚಿಕತ್ಸೆ ನೀಡಲಾಗುವುದು. ಇದು ಸಂಪೂರ್ಣವಾಗಿ ಗುಣಮುಖವಾಗುವಂತಹ ಕಾಯಿಲೆಯಾಗಿದೆ. ರೋಗಿಯು ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಮುಟ್ಟುವುದರಿಂದ, ಕೈ ಕುಲುಕುವುದರಿಂದ ಬರುವುದಿಲ್ಲ. ಕ್ಷಯ ರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿದೆ. ಇದರ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ಹಸಿರು ತರಕಾರಿ, ಹಾಲು, ಹಣ್ಣು, ಮೊಟ್ಟೆ, ಮೀನು ಸೇವನೆ ಮಾಡಬೇಕು. ಎಣ್ಣೆಯಲ್ಲಿ ಬೇಯಿಸಿದ, ಕರಿದ ಆಹಾರಗಳ ಸೇವನೆ ಬೇಡ ಎಂದು ರೋಗಕ್ಕೆ ಸಂಬಂಧಿಸಿದಂತೆ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ.ಪಾಟೀಲ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪುಷ್ಪಾ ಆರ್.ರ್ತನಹೊನ್ನದ್, ನಾಗೇಶ್ವರಿ ಮುಗಳಿವಾಡಿ, ಸಂಗಮ್ಮ ಅತನೂರ, ಗಂಗಾಜ್ಯೋತಿ ಗಂಜಿ, ಮಂಗಲಾ ಚಂದಾಪುರೆ, ಗಂಗಮ್ಮ, ರೇಶ್ಮಾ ನಕ್ಕುಂದಿ, ಅರ್ಚನಾ ಸಿಂಗೆ, ಅನಿತಾ ಕಣಸೂರ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ, ನಾಗಮ್ಮ ಚಿಂಚೋಳಿ ಸೇರಿದಂತೆ ಇನ್ನಿತರರು ಇದ್ದರು.