ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಮನ್ನಣೆ: ಸಿಎಂ

ತುಮಕೂರು, ಸೆ. 6- ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಧುಗಿರಿಯ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿನಿತ್ಯ 54 ಲಕ್ಷ ಶಾಲಾ ಮಕ್ಕಳ ಪೌಷ್ಠಿಕತೆಗೆ ನೆರವಾಗಿರುವ ನಮ್ಮ ಸರ್ಕಾರದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಫೆಡರೇಷನ್‌ವೊಂದು ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.
ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ. ಈ ಯೋಜನೆ ಹೀಗೆ ಮುಂದುವರೆಯಲಿದೆ ಎಂದರು.
ಮಕ್ಕಳು‌ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತಿ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ ಎಂದು ಅವರು ಹೇಳಿದರು.
ಬಿಜೆಪಿ ವಿರುದ್ಧ ವಾಗ್ದಾಳಿ
ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ‌ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ವಾಗ್ದಾಳಿ ನ‌ಡೆಸಿದರು.
ಬಡವರಿಗೆ ಉಚಿತ ಕಾರ್ಯಕ್ರಮ ನೀಡಿದರೆ ದೇಶ ದಿವಾಳಿಯಾಗುತ್ತದೆ, ಅದಾನಿ, ಅಂಬಾನಿಯವರಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ ಎಂದು ಪ್ರಶ್ನಿಸಿದ ಅವರು, ನಮ್ಮ ಸರ್ಕಾರ ಘೋಷಿಸಿರುವ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ತೋರಿಸುತ್ತೇವೆ. ಹಾಗೆಯೇ ರಾಜ್ಯವನ್ನು ದಿವಾಳಿಯಾಗಲು ನಾವು ಬಿಡುವುದಿಲ್ಲ ಎಂದು ತಿರುಗೇಟು ನೀಡಿದರು.
ಬಡವರ ವಿರೋಧಿ ಬಿಜೆಪಿ
ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಸಲುವಾಗಿ ಹಣ ಕೊಡುತ್ತೇವೆ ಅಕ್ಕಿ ಕೊಡಿ ಎಂದು ಫುಡ್ ಕಾರ್ಪೋರೇಷನ್‌ಗೆ ಪತ್ರ ಬರೆದಿದ್ದೆವು. ಅದಕ್ಕೆ ಅವರು ಸಹ ಒಪ್ಪಿಗೆ ನೀಡಿದ್ದರು. ಆದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ಬಿಡಲಿಲ್ಲ ಎಂದ ಅವರು ಬಿಜೆಪಿಯವರು ಬಡವರ ಪರವಾಗಿಲ್ಲ. ಇವರು ಬಡವರ ವಿರೋಧಿಗಳು. ಮನುಷ್ಯತ್ವ ಇಲ್ಲದೇ ಇರುವ ಜನ ಎಂದು ಗುಡುಗಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ಒಂದೇ ಒಂದು ವೋಟು ಸಹ ಹಾಕಬೇಡಿ ಎಂದು ಅವರು ಕರೆ ನೀಡಿದರು.
ಸಮಾರಂಭದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ , ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ , ಶಾಸಕರುಗಳಾದ ಟಿ.ಬಿ. ಜಯಚಂದ್ರ, ಡಾ. ರಂಗನಾಥ್, ಕೆ. ಷಡಕ್ಷರಿ, ಎಸ್.ಆರ್. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.