ಖರ್ಗೆ ಎದುರು ಒಗ್ಗಟ್ಟು ಪ್ರದರ್ಶನ

ನವದೆಹಲಿ,ಮೇ.೧೮- ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಹಗ್ಗ ಜಗ್ಗಾಟ ಕೊನೆಗೂ ಪೂರ್ಣ ವಿರಾಮ ಬಿದ್ದಿದೆ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಒಗ್ಗಟ್ಟು ಪ್ರದರ್ಶಿಸಿದರು.
ಕಾಂಗ್ರೆಸ್ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಮುಖಾಮುಖಿಯಾಗಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಉಪಹಾರ ಕೂಟ ಸಭೆಯ ಬಳಿಕ ನೇರವಾಗಿ ಒಂದೇ ಕಾರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಕೈಯನ್ನು ಮೇಲಕ್ಕೆ ಎತ್ತುವ ಮೂಲಕ ಕಾಂಗ್ರೆಸ್ ಪಕ್ಷ ನಾವು ಒಂದು ಎನ್ನುವುದನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರದರ್ಶಿಸಿದ್ದಾರೆ.
ರಾಹುಲ್ ಗಾಂಧಿ ಭೇಟಿ:
ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಅವರ ಸಹಕಾರ ಮತ್ತು ಆಶೀರ್ವಾದ ಪಡೆದ ನಂತರ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು
ಇದೇ ವೇಳೆ ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ನೀಡಿದ ಐದು ಭರವಸೆಗಳು ಸೇರಿದಂತೆ ಎಲ್ಲ ಭರವಸೆಗಳನ್ನು ಈಡೇರಿಸಿ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.