ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50 ರಷ್ಟು ಮೀಸಲಿಡಲು ಜಿಲ್ಲಾಧಿಕಾರಿ ಸೂಚನೆ

ಗದಗ ಏ 27 : ಕೋವಿಡ್-19 ಪ್ರಕರಣಗಳು ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದನ್ವಯ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮೀಸಲಿಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರಿಗೆ ನಿಗದಿಪಡಿಸಿದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಿದಾಗ ಅಂತಹ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸದಂತೆ ತಿಳಿಸಿದರು. ಸರಕಾರಿ ಆಸ್ಪತ್ರೆಗಳಿಂದ ಸೂಚಿಸಲಾಗುವ ಸೋಂಕಿತರ ಚಿಕಿತ್ಸೆಗೆ ಸರಕಾರ ನಿಗದಿಪಡಿಸಿರುವ ದರಗಳನ್ವಯ ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಿದರು.

ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕದ ಕೊರತೆಯಾಗದಂತೆ ಸಾಕಷ್ಟು ಮುಂಚಿತವಾಗಿ ದಾಸ್ತಾನಿಟ್ಟುಕೊಳ್ಳುವಂತೆ ತಿಳಿಸಿದರು. ಆಮ್ಲಜನಕದ ಕೊರತೆ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು. ರೆಮಿಡಿಸಿವರ ಲಸಿಕೆಗಳನ್ನು ಸರಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗುತ್ತಿದ್ದು ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೂ ಒದಗಿಸಲು ಕ್ರಮ ಕೈಗೊಳ್ಳಲಾಗುವದು ಎಂದರು.

ಕೋವಿಡ್-19 ಚಿಕಿತ್ಸೆಗಾಗಿ ನೇರವಾಗಿ ದಾಖಲಾಗುವ ಸೋಂಕಿತರಿಗೂ ಚಿಕಿತ್ಸೆ ಒದಗಿಸಬೇಕು. ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯದ ಕ್ರಮ ಜರುಗಿಸುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ತಂಡವನ್ನು ರಚಿಸಿ ಖಾಸಗಿ ಆಸ್ಪತ್ರೆಗಳಲ್ಲಿರುವ ಜನರಲ್, ಐಸಿಯು, ಆಕ್ಸಿಜನ ಹಾಗೂ ವೆಂಟಿಲೇಟರ ಹಾಸಿಗೆಗಳ ಬಗ್ಗೆ ಮಾಹಿತಿಯನ್ನು ಕ್ರೋಡಿಕರಿಸಲು ಸೂಚಿಸಿದರು. ಜಿಲ್ಲೆಯಲ್ಲಿನ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹಾಸಿಗೆ ಲಭ್ಯವಿಲ್ಲದಿರುವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಕ್ರಮ ವಹಿಸಿಬೇಕು. ಅಲ್ಲದೇ ಖಾಸಗಿ ಆಸ್ಪತ್ರೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸೋಂಕಿತರ ಚಿಕಿತ್ಸೆಯ ವಿವರ ಪಡೆದುಕೊಳ್ಳುವಂತೆ ತಿಳಿಸಿದರು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ತೊಂದರೆಯಾಗದಂತೆ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳು ಸಮನ್ವಯತದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಬಸರಿಗಿಡದ ಮಾತನಾಡಿ ಕಳೆದ ಸಾಲಿನಲ್ಲಿ ಏಳು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು ಈ ಬಾರಿಯೂ ಅದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗತ್ತಿದೆ. ಸರಕಾರದ ಸುತ್ತೋಲೆಯನ್ವಯ ಖಾಸಗಿ ಆಸ್ಪತ್ರೆಯ ಪ್ರತಿಶತ 50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮೀಸಡಲು ಹಾಗೂ ಸರಕಾರ ನಿಗದಿಪಡಿಸಿದ ದರ ಆಕರ ಮಾಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್., ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಗೋಜನೂರ, ತಾಲೂಕು ವೈದ್ಯಾಧಿಕಾರಿ ಡಾ. ನೀಲಗುಂದ, ಖಾಸಗಿ ಆಸ್ಪತ್ರೆ ಆಡಳಿತಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.