ಗಂಗಾ ಕಲ್ಯಾಣ-ವಸತಿ ಯೋಜನೆ: ನಿಗದಿತ ಅವಧಿಯೋಳಗೆ ಫಲಾನುಭವಿಗಳ ಆಯ್ಕೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ

ವಿಜಯಪುರ:ನ.14: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ.ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ವಿವಿಧ ವಸತಿ ಯೋಜನೆಯಡಿ ಆಯ್ಕೆ ಮಾಡಬೇಕಾದ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರವಿವಾರ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿ, ಪಾರದರ್ಶಕತೆಯಿಂದ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಮೊರಾರ್ಜಿ ವಸತಿ ಶಾಲೆಗಳಲ್ಲಿ ನಡೆಯುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ, ಕರಾಟೆ, ಸ್ಪೋಕನ್ ಇಂಗ್ಲೀಷ್, ವ್ಯಕ್ತಿತ್ವ ವಿಕಸನ ತರಬೇತಿಗಳು ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಡೆಯುತ್ತಿರುವ ಮಿಷನ್ ವಿದ್ಯಾಪುರ ಅಚ್ಚುಕಟ್ಟಾಗಿ ನಡೆಯುತ್ತಿರುವುದಕ್ಕೆ ಶ್ಲಾಘಿಸಿದ ಸಚಿವರು, ಜಿಲ್ಲೆಯ ಎಲ್ಲ ಹಾಸ್ಟೇಲ್‍ಗಳಲ್ಲಿ ಈ ಕಾರ್ಯಕ್ರಮಗಳ ಆಯೋಜನೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 25 ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಕೇವಲ 4 ಸ್ವಂತ ಕಟ್ಟಡಗಳು ಹೊಂದಿದ್ದು, ಉಳಿದ ಹಾಸ್ಟೆಲ್‍ಗಳು ಸಹ ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವಂತೆ ಸ್ವಂತ ಕಟ್ಟಡಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲಾಖೆಯ ಹಾಸ್ಟೆಲ್ ಕಾಮಗಾರಿಗಳು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಭಿಯಂತರರಿಗೆ ಸೂಚಿಸಿದ ಅವರು, ಶೀಘ್ರವಾಗಿ ಕಟ್ಟಡ ಕಾಮಗಾರಿ ಪೂರ್ಣಗೊಂಡು ಸ್ವಂತ ಕಟ್ಟಡಗಳಲ್ಲಿ ಹಾಸ್ಟೇಲ್‍ಗಳು ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಚಾರ್ಯರು ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಈ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಬಗೆ ಹರಿಸಲಾಗುವುದು. ಇಲಾಖೆಯ ಅಡುಗೆ ಸಿಬ್ಬಂದಿ ಸ್ವಚ್ಛತಾಗಾರರು ಸೇರಿದಂತೆ ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಕುರಿತು ಉನ್ನತ ಮಟ್ಟದಲ್ಲಿ ಚರ್ಚಿಸಿ ವೇತನಕ್ಕೆ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ದಿ ಇಲಾಖೆಯಲ್ಲಿನ ಅಧಿಕಾರಿ-ನೌಕರರ ಪದೋನ್ನತಿ- ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೌನ್ಸಿಲಿಂಗ್ ಮೂಲಕ ಜರುಗಿಸಲಾಗುವುದು ಎಂದು ಹೇಳಿದರು.

ತಿಕೊಟಾ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು, ವಸತಿ ಶಾಲೆಯಲ್ಲಿನ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಕುಂದು-ಕೊರತೆಗಳನ್ನು ಆಲಿಸಿದ ಅವರು, ಸಣ್ಣ-ಪುಟ್ಟ ಸಮಸ್ಯೆಗಳಿದ್ದಲ್ಲಿ ಪ್ರಾಚಾರ್ಯರು ತಮ್ಮ ಹಂತದಲ್ಲಿಯೇ ಬಗೆಹರಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಎಸ್ ಪಾಟೀಲ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಣ್ಣ ಆಶಾಪುರ, ಮೊರಾರ್ಜಿ ವಸತಿ ಶಾಲೆಗಳ ಸಮನ್ವಯ ಅಧಿಕಾರಿ ಸಜ್ಜನ, ಸಮಾಜ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಪುಂಡಲಿಕ ಮನೋಹರ ಸೇರಿದಂತೆ ಇತರರು ಉಪಸ್ಥಿತರಿದ್ದರು.