ಗಡ್ಕರಿ ಕೊಲೆ ಬೆದರಿಕೆ ಪ್ರಕರಣ-ಎಫ್‌ಐಆರ್ ದಾಖಲು

ಬೆಳಗಾವಿ,ಮೇ.೨೫- ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಆರೋಪಿ ಜಯೇಶ್ ಪೂಜಾರಿ ಕೊಲೆ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ. ಮಾರ್ಚ್ ೨೧ರಂದು ಮಹಾರಾಷ್ಟ್ರದ ನಾಗಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದ. ಅಲ್ಲದೆ, ಈ ಹಿಂದೆ ಜನವರಿ ೧೪ರಂದು ಸಚಿವರ ಕಚೇರಿಗೆ ಕರೆ ಮಾಡಿ ೧೦ ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಬೆಳಗಾವಿ ಜೈಲಿನ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ದಾವೂದ್ ಇಬ್ರಾಹಿಂ ಗ್ಯಾಂಗ್ ನ ಸದಸ್ಯ ಎಂದು ಹೇಳಿ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಹಾಕಿದ್ದರು. ಈ ಹಿನ್ನಲೆಯಲ್ಲಿ ಎನ್‌ಐಎ ಅಧಿಕಾರಿಗಳು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಎಫ್‌ಐಆರ್ ಮಾಹಿತಿಯನ್ನು ಅವರು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ರವಾನಿಸಿದ್ದಾರೆ.