
ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.08:- ಮಾರಕ ರೋಗಗಳ ವಿರುದ್ದ ಹೋರಾಡುವ ಲಸಿಕೆಗಳನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ತಪ್ಪದೆ ಕಾಲ ಕಾಲಕ್ಕೆ ಕೊಡಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತೀವ್ರತರ ಮಿಷನ್ ಇಂಧ್ರಧನುಷ್ ಅಭಿಯಾನ 5.0 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ದಡಾರ, ರುಬೆಲ್ಲಾ ನಿರ್ಮೂಲನೆ ಮಾಡಲು ಲಸಿಕೆ ನೀಡಲಾಗುತ್ತಿದೆ. ಇನ್ನಿತರ ರೋಗಗಳ ನಿರೋಧಕ ಶಕ್ತಿಗಾಗಿ ಕಾಲಕಾಲಕ್ಕೆ ಲಸಿಕೆ ಕೊಡಲಾಗುತ್ತಿದೆ. ಮಕ್ಕಳು ಗರ್ಭಿಣಿಯರಿಗೆ ಲಸಿಕೆ ನೀಡುವ ಸಲುವಾಗಿ ಮಿಷನ್ ಇಂಧ್ರಧನುಷ್ ಕಾರ್ಯಕ್ರಮದ ಮೂಲಕ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕರು ಸಲಹೆ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿರುವ ಅನಾರೋಗ್ಯ ನಿವಾರಣೆಗೆ ಆರೋಗ್ಯಇಲಾಖೆಯ ವೈಧ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಮಕ್ಕಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಆರೋಗ್ಯ ರಕ್ಷಣೆಗೆ ವಿಶೇಷ ಮುತುವರ್ಜಿ ವಹಿಸಬೇಕೆಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಮಾತನಾಡಿ ಇಂದ್ರಧನುಷ್ 5.0 ಅಭಿಯಾನವು ಲಸಿಕೆಯನ್ನು ಪಡೆಯದ ಚಿಕ್ಕ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಲಸಿಕೆ ನೀಡುವ ಕಾರ್ಯಕ್ರಮವಾಗಿದೆ. ಆರೋಗ್ಯಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಲಸಿಕೆಯ ಪ್ರಯೋಜನಗಳ ಬಗ್ಗೆ ತಿಳಿಸಿ ಅಭಿಯಾನ ಯಶಸ್ವಿಯಾಗಿಸಲು ಮುಂದಾಗಿದ್ದಾರೆ. ಲಸಿಕೆಯನ್ನು ಪಡೆಯದ ಮಕ್ಕಳು ಗರ್ಭಿಣಿಯರು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.
ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಮಾರಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಿ ಅವುಗಳನ್ನು ಸಂಪೂರ್ಣ ತಡೆಗಟ್ಟುವಲ್ಲಿ ಕಾರ್ಯನಿರ್ವಹಿಸಬೇಕಿದೆ. ಜನರ ಆರೋಗ್ಯ ಸೌಲಭ್ಯಗಳಿಗೆ ಆದ್ಯತೆ ನೀಡಲಾಗುವುದು. ಕಾಯಿಲೆ ಬರುವ ಮುನ್ನವೇ ಅದನ್ನು ತಡೆಯುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಿಷನ್ ಇಂದ್ರಧನುಷ್ ಅಭಿಯಾನ ಜಾಗೃತಿಕುರಿತ ಪೋಸ್ಟರ್ ಗಳನ್ನು ಗಣ್ಯರು ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಆರ್.ಸಿ.ಹೆಚ್. ಅಧಿಕಾರಿ ಡಾ. ಮಂಜುನಾಥ್, ನಗರಸಭಾ ಸದಸ್ಯರಾದ ಅಪ್ಸರ್ ಪಾಷ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಡಾ. ಉಮಾರಾಣಿ, ಡಾ. ಮಮತಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.