ಗುಂಬಜ್ ಮಾದರಿ ಬಸ್ ನಿಲ್ದಾಣ ತೆರವಿಗೆ ಸೂಚನೆ

ಮೈಸೂರು,ನ.೧೬- ವಿವಾದಕ್ಕೆಡೆ ಮಾಡಿಕೊಟ್ಟಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ತೆರವು ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈಸೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಿದೆ.
ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಾಣವಾಗಿರುವ ಬಸ್ ತಂಗುದಾಣ ಅನಧಿಕೃತವಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೋಟಿಸ್ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಲಭಾಗದಲ್ಲಿ ಬಸ್ ತಂಗುದಾಣ ನಿರ್ಮಿಸಲಾಗಿದೆ. ಈ ಹಿಂದೆ ಸಹ ಅನೇಕ ಬಾರಿ ಬಸ್ ತಂಗುದಾಣ ನಿರ್ಮಿಸದಂತೆ ಸೂಚಿಸಲಾಗಿತ್ತು. ಆದರೂ ಅನಧಿಕೃತವಾಗಿ ತಂಗುದಾಣ ನಿರ್ಮಾಣ ಮಾಡಲಾಗಿದೆ. ಈ ತಂಗುದಾಣದ ವಿನ್ಯಾಸ ವಿವಾದಕ್ಕೆಡೆ ಮಾಡಿಕೊಟ್ಟಿದೆ. ತಕ್ಷಣವೇ ಇದನ್ನು ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ತಂಗುದಾಣವನ್ನು ಪಾಲಿಕೆ ತೆರವುಗೊಳಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆಯಡಿ ಮುಂದಿನ ಕ್ರಮಕೈಗೊಳ್ಳುವುದಾಗಿಯೂ ನೋಟಿಸ್‌ನಲ್ಲಿ ಹೇಳಲಾಗಿದೆ.