ಗುಜರಾತ್ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಅಹ್ಮದಾಬಾದ್, ಸೆ.16-ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ನ್ಯಾಯಾಲಯವು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ 18 ಮಂದಿಗೆ 6 ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ಇಂದು ಈ ಶಿಕ್ಷೆ ಪ್ರಕಟವಾಗಿದ್ದು, 2016ನೇ ಸಾಲಿನಲ್ಲಿ ದಲಿತ ಹಕ್ಕುಗಳ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಮೇವಾನಿ ಮತ್ತು ಅವರ ಸಹಚರರು ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬಿಆರ್ ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಸಾರ್ವಜನಿಕ ಆಸ್ತಿ ಹಾನಿ ಮತ್ತು ಗಲಭೆ ಮತ್ತಿತರ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.ಇದೇ ಪ್ರಕರಣ ಸಂಬಂಧ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.