ಗುಡುಗು ಮತ್ತು ಸಿಡಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಕೆಲವು ಸಲಹೆಗಳು

ಕಲಬುರಗಿ:ಏ.25:ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಳಕಂಡಂತೆ ಕೆಲವು ಸಲಹೆ/ಸೂಚನೆಗಳನ್ನು ನೀಡಿದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಾರ್ವಜನಿಕರು ಕೆಳಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

    ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ-ಸೂಚನೆಗಳು ಇಂತಿವೆ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಜಾನುವಾರು ಮೇಯಿಸುವವರು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸುವವರು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಒಳ್ಳೆಯದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಾದ ಮನೆ, ಕಚೇರಿ, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. ಕೆರೆ ಮತ್ತು ನದಿಗಳು ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರವಿರಬೇಕು. 
   ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಮರಗಳು ಮತ್ತು ವಿದ್ಯುತ್ ಲೈನ್‍ಗಳಿಂದ ದೂರದಲ್ಲಿ ತಮ್ಮ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು. 
 ವಿದ್ಯುತ್, ಟೆಲಿಫೆÇೀನ್ ಕಂಬ ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೆÇೀನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ /ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ ಹಾಗೂ ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. 

ಮೊಬೈಲ್ ಫೋನ್ ಹಾಗೂ ದೂರವಾಣಿ ಬಳಸುವಂತಿಲ್ಲ: ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೆÇೀನ್ ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು. ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು ಮಿಂಚಿನ ಒಡೆತದಿಂದಾಗಿ ಕಾಡ್ತಿಚ್ಚು ಸಂಭವಿಸುವ ಸಾಧ್ಯತೆಯಿದೆ.

ಗುಡುಗು ಸಿಡಿಲಿನ ಸಮಯದಲ್ಲಿ ಬಯಲು ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ, ತಕ್ಷಣವೇ ಹತ್ತಿರದಲ್ಲೇ ಇರುವ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗುವುದು. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು. 
  ವಿದ್ಯುತ್ ಉಪಕರಣಗಳ ಸಂಪರ್ಕ ಕಡಿತಗೊಳಿಸಬೇಕು. ಗುಡುಗು ಸಿಡಿಲಿನ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ /ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‍ಟಾಪ್, ವಿಡಿಯೋ ಗೇಮ್ ಸಾಧನಗಳು, ಮೊಬೈಲ್ ಫೆÇೀನ್, ವಾಷಿಂಗ್ ಮಷಿನ್, ಸ್ಟವ್ ಹಾಗೂ ಇತರೆ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರಿಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್‍ಗಳು, ಬಾತ್‍ಟಬ್‍ಗಳು ಅಥವಾ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು. 

ಸಿಡಿಲು/ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ ಇಂತಿದೆ. ಸಿಡಿಲು / ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 / 108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ಈ ಕೆಳಕಂಡಂತೆ ನೀಡುವ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು / ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು (electrical charges) ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು (Carotid Artery) ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.

   ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ Cardiac compressions ಹಾಗೂ Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. 
  ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳ ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾಶ್ರ್ವವಾಯು/ ಲಕ್ಷಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ  ಅವರನ್ನು ಸೂಕ್ತ ರಕ್ಷಣಾ ಸ್ಮಳಕ್ಕೆ ಸ್ಥಳಾಂತರಿಸಬೇಕು.
 ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು/ ಅಘಾತಕ್ಕೆ ಒಳಗಾಗಿರಬಹುದು. ಆದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ, ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು.