ಗುತ್ತಿಗೆ ವೈದ್ಯರ ಸೇವೆ ೬ ತಿಂಗಳು ವಿಸ್ತರಣೆ


ಬೆಂಗಳೂರು,ಮಾ.೨೧- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸೇವೆಯನ್ನು ಮುಂದಿನ ೬ ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕವಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸೇವಾ ಅವಧಿಯನ್ನು ೧-೪-೨೦೨೧ ರಿಂದ ಅನ್ವಯವಾಗುವಂತೆ ೬ ತಿಂಗಳವರೆಗೆ ಅಂದರೆ ೩೦-೦೯-೨೦೨೧ರವರೆಗೆ ವಿಸ್ತರಿಸಲಾಗಿದೆ ಎಂದು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ರಾಜ್ಯದ ೧೮ ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಕರು, ಪ್ರಯೋಗಾಲಯ ತಜ್ಞರು ಸೇರಿದಂತೆ ಒಟ್ಟು ೪೫ ವೈದ್ಯ ಸಿಬ್ಬಂದಿಗಳ ನೇಮಕಕ್ಕೆ ಸರ್ಕಾರ ಅವಕಾಶ ನೀಡಿತ್ತು. ಅದರಂತೆ ೮೧೦ ಸಿಬ್ಬಂದಿ ನೇಮಕಗೊಂಡಿದ್ದರು.
ಇವರ ಸೇವಾವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇವರ ಸೇವಾವಧಿಯನ್ನು ಸೆ. ೩೦ರವರೆಗೆ ವಿಸ್ತರಿಸಲಾಗಿದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.