
ತುಮಕೂರು, ಸೆ. ೮- ಜಿಲ್ಲೆಯ ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿಗೆ ಇಂದು ಬೆಳಿಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಇಂದು ಬೆಳಿಗ್ಗೆ ಗುಬ್ಬಿ ತಾಲ್ಲೂಕು ಕಚೇರಿಗೆ ಹಠಾತ್ ಭೇಟಿ ನೀಡುವ ಮೂಲಕ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ ಸಚಿವರು, ಯಾವುದೇ ಕಾರಣಕ್ಕೂ ರೈತರ ಜಮೀನಿನ ಪಹಣಿ, ಖಾತೆ, ಪೌತಿ ಖಾತೆಗಳು ಬಾಕಿ ಉಳಿಯಬಾರದು. ರೈತರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೇ ಶೀಘ್ರವಾಗಿ ಮಾಡಿಕೊಡಬೇಕು ಎಂದು ತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಬ್ಬಿ ತಾಲ್ಲೂಕು ಕಚೇರಿಯ ಪ್ರತಿಯೊಂದು ವಿಭಾಗಕ್ಕೂ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರೊಂದಿಗೆ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ ಅವರು ಅಲ್ಲಿನ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಗುಬ್ಬಿ ತಹಶೀಲ್ದಾರ್ ಬಿ. ಆರತಿ ಇದ್ದರು.
ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ
ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವ ಕೃಷ್ಣ ಭೈರೇಗೌಡ ಅವರು ಇಂದು ಮಧ್ಯಾಹ್ನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಕಂದಾಯ ಇಲಾಖೆಯಲ್ಲಿ ವಿಲೇವಾರಿಯಾಗದೆ ಬಾಕಿ ಉಳಿದಿರುವ ಕಡತಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ಸೂಚಿಸಿದ ಅವರು, ರೈತರು ಜಮೀನಿಗಳ ಖಾತೆ, ಪಹಣಿ, ಪೌತಿ ಖಾತೆಗೆ ಅರ್ಜಿ ಸಲ್ಲಿಸಿದರೆ ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಒಂದು ವೇಳೆ ರೈತರನ್ನು ವಿನಾ ಕಾರಣ ಕಚೇರಿಗೆ ಅಲೆದಾಡಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ. ಪ್ರಭು ಸೇರಿದಂತೆ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಭಾಗವಹಿಸಿದ್ದರು.