ಗೃಹಲಕ್ಷ್ಮಿ ಯೋಜನೆ ತಲುಪಿಸಲು ವಿಶೇಷ ಗಮನ

ಬೆಂಗಳೂರು, ಆ.೩೦- ರಾಜಧಾನಿ ಬೆಂಗಳೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆಯೂ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ವಿಶೇಷ ಗಮನ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಪುರಭವನ ಸಭಾಂಗಣದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨ ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆ ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅನು?ನಗೊಳಿಸಲಾಗುತ್ತಿದ್ದು ಬೆಂಗಳೂರಿನಲ್ಲಿಯೂ ಗೃಹ ಲಕ್ಷ್ಮೀ ಯೋಜನೆ ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಅದರಂತೆ ಪ್ರತಿ ವಾರ್ಡಿನಲ್ಲಿಯೂ ಫಲಾನುಭವಿಗಳ ಜೊತೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಗೃಹ ಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ನೇರ ನಗದು ಸೌಲಭ್ಯ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಇಂದು ಏಕಕಾಲದಲ್ಲಿ ಗೃಹ ಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಬೆಂಗಳೂರು ಎಲ್ಲೆಡೆ ಯಶಸ್ವಿಯಾಗಿ ನಡೆಸಲು ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ರಾಜ್ಯಮಟ್ಟದ ಕಾರ್ಯಕ್ರಮವು ಇಂದು ಮೈಸೂರಿನಲ್ಲಿ ನಡೆಯುವುದರಿಂದ, ಪ್ರತಿ ಕಾರ್ಯಕ್ರಮದಲ್ಲಿ ಒಂದು ಟಿವಿ ಹಾಗೂ ೧೦*೧೦ ಅಳತೆಯ ಎಲ್‌ಇಡಿ ಪರದೆಯನ್ನು ಇಟ್ಟು ಟಿವಿ ಮೂಲಕ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ಪ್ರದರ್ಶಿಸಲು ಹಾಗೂ ಎಲ್‌ಇಡಿ ಪರದೆಯಲ್ಲಿ ಮೈಸೂರು ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಬಿಬಿಎಂಪಿ ವಲಯ ಆಯುಕ್ತರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.