ಗೆಲುವು ನಮ್ಮದೆ ಡಿಕೆಶಿ ವಿಶ್ವಾಸ

ಕಲ್ಬುರ್ಗಿ, ಮಾ. ೩೦- ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನೆ ಬೆಂಬಲಿಸಿ ಗೆಲ್ಲಿಸುವುದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬಸವಕಲ್ಯಾಣ ಕ್ಷೇತ್ರಕ್ಕೆ ತೆರಳುವ ಮುನ್ನ ಕಲ್ಬುರ್ಗಿಯ ಐವನ್‌ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಹಲವು ಜನವಿರೋಧಿ ನೀತಿಗಳನ್ನು ಜಾರಿ ಮಾಡಿದೆ. ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.
ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದ ಜನತೆ ಬೇಸತ್ತಿದ್ದಾರೆ. ಚುನಾವಣೆಯಲ್ಲಿ ಜನ ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದ ಜನತೆ ಬೀದಿಗಿಳಿದು ಹೋರಾಟ ಮಾಡುವಂತಾಗಿದೆ. ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಅವರು ಹೇಳಿದರು.
ಬೆಳಗಾವಿಯಲ್ಲಿ ತಮ್ಮ ಕಾರಿನ ಮೇಲೆ ಕಲ್ಲು, ಚಪ್ಪಲಿ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕಾರಣದಲ್ಲಿ ಇದೆಲ್ಲಾ ಕಾಮನ್. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರು ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು.
ರಾಜಕೀಯ ಜೀವನದಲ್ಲಿ ಇರುವವರು ಎಲ್ಲವನ್ನೂ ಸ್ವೀಕರಿಸಬೇಕು ಎಂದು ಅವರು ಹೇಳಿದರು.