ಗೋವಾ: ಕೈ ಮೇಲುಗೈಗಾಗಿ ನಾಳೆ ಪ್ರಿಯಾಂಕ ಭೇಟಿ

ಪಣಜಿ,ಡಿ.೮- ಗೋವಾ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಶತಾಯ ಗತಾಯ ಈ ಬಾರಿ ಅಧಿಕಾರ ಹಿಡಿಯಬೇಕು ಎನ್ನುವ ಜಿದ್ದಿಗೆ ಕಾಂಗ್ರೆಸ್ ಬಿದ್ದಿದೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಳೆ ಗೋವಾಗೆ ಭೇಟಿ ನೀಡಲಿದ್ದು ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೂದಲೆಳೆಯ ಅಂತರದಲ್ಲಿ ಅಧಿಕಾರದಿಂದ ವಂಚಿತರಾದ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದೆ.
ಚುನಾವಣಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಿರುವ ಪ್ರಿಯಾಂಕಾ ಗಾಂಧಿ ಅವರು ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮುಖಂಡರೊಂದಿಗೆ ಚುನಾವಣಾ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಪಕ್ಷ ತೊರೆಯುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಮನವೊಲಿಸುವುದು ಮತ್ತು ಈಗಾಗಲೇ ಕೆಲವರು ಪಕ್ಷ ಬಿಟ್ಟು ಹೋಗಿದ್ದು ಅವರಿಂದ ತೆರವಾದ ಸ್ಥಾನ ತುಂಬುವುದು ಹೇಗೆ ಎಂಬುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖಂಡರು ಮತ್ತು ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಗೋವಾ ಸೇರಿದಂತೆ ಐದು ರಾಜ್ಯಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದ್ದು ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ನಿರತವಾಗಿದೆ.
ಗೋವಾ ಜೊತೆಗೆ ಪಂಜಾಬ್ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯ ಪಣವನ್ನಾಗಿ ಸ್ವೀಕಾರ ಮಾಡಿದೆ.