ಗ್ಯಾರಂಟಿಗೆ ವಾರಂಟಿ ಸಭೆ

ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಸೌಧದಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಬೆಂಗಳೂರು, ಮೇ ೨೯- ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜೂನ್ ೧ ರಿಂದ ಜಾರಿ ಮಾಡುವುದು ಬಹುತೇಕ ನಿಶ್ಚಿತ. ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.ಜೂನ್ ೧ ರಂದು ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಜಾರಿಯ ರೂಪುರೇಷೆಗಳನ್ನು ಅಂತಿಮಗೊಳಿಸಿ ಜೂ. ೧ ರಿಂದಲೇ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ.ಗ್ಯಾರಂಟಿ ಯೋಜನೆಗಳ ಜಾರಿಯ ಸಿದ್ಧತೆ, ಮಾರ್ಗಸೂಚಿಗಳು ಯಾರಿಗೆ ಗ್ಯಾರಂಟಿ ಯೋಜನೆಯನ್ನು ನೀಡಬೇಕು ಎಂಬೆಲ್ಲಾ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಉನ್ನತ ಮಟ್ಟದ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿತ್ತು. ಅದರಂತೆ ೫ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ೮ ಸಚಿವರು ಪ್ರಮಾಣ ವಚನ ದಿನವೇ ನಿರ್ಧಾರ ಕೈಗೊಳ್ಳಲಾಗಿತ್ತು.
ಪ್ರಮಾಣ ವಚನದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡು ಈ ಸಂಬಂಧ ಸರ್ಕಾರಿ ಆದೇಶವನ್ನು ಹೊರಡಿಸಲಾಗಿತ್ತು.
ಈ ಐದು ಗ್ಯಾರಂಟಿ ಯೋಜನೆಗಳ ಜಾರಿಯ ರೂಪುರೇಷೆ, ಮಾರ್ಗಸೂಚಿಗಳನ್ನು ನಂತರ ಹೊರಡಿಸುವುದಾಗಿ ಸರ್ಕಾರಿ ಆದೇಶದಲ್ಲಿ ಹೇಳಲಾಗಿತ್ತು. ಅದರಂತೆ ಗ್ಯಾರಂಟಿ ಯೋಜನೆಗಳ ಜಾರಿಯ ರೂಪುರೇಷೆಗಳ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಕರ್ನಾಟಕ ವಿದ್ಯುತ್ ನಿಗಮದ ಪ್ರಧಾನ ಕಚೇರಿ ಶಕ್ತಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಜಾರಿಯ ಮಾರ್ಗಸೂಚಿ, ಯಾರಿಗೆಲ್ಲಾ ಈ ಯೋಜನೆಗಳನ್ನು ನೀಡಬೇಕು ಎಂಬ ಬಗ್ಗೆ ಚರ್ಚೆಗಳು ನಡೆದವು.ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಅನ್ನಭಾಗ್ಯ ಯೋಜನೆಯಡಿ ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ ೧೦ ಕೆಜಿ ಅಕ್ಕಿ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ೨ ಸಾವಿರ ರೂ., ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ೨೦೦ ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಗ್ಯಾರಂಟಿಗಳನ್ನು ನೀಡಿತ್ತು. ಅದರಂತೆ ಇಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಇಲಾಖಾ ಮುಖ್ಯಸ್ಥರ ಜತೆ ಮುಖ್ಯಮಂತ್ರಿಗಳು ಯೋಜನೆಯ ಅನುಷ್ಠಾನದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.ಈ ಯೋಜನೆ ಜಾರಿಯಿಂದ ಆಗುವ ಆರ್ಥಿಕ ಹೊರೆ, ಈ ಯೋಜನೆಯ ಜಾರಿಗೆ ರೂಪಿಸಬೇಕಾಗಿರುವ ಮಾರ್ಗಸೂಚಿ ಎಲ್ಲದರ ಬಗ್ಗೆಯೂ ಸಮಾಲೋಚನೆ ನಡೆಸಿದರು.ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕಾಗಿರುವ ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಯುವಜನ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮುಖ್ಯಸ್ಥರುಗಳ ಜತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಯುವಜನ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮುಖ್ಯಸ್ಥರುಗಳು, ಹಣಕಾಸು ಇಲಾಖೆಯ ಮುಖ್ಯಸ್ಥರುಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಸಂದರ್ಭದಲ್ಲಿ ಪ್ರತಿ ಇಲಾಖೆಯ ಮುಖ್ಯಸ್ಥರುಗಳು ಈ ಯೋಜನೆಗಳ ಜಾರಿ ಸಂಬಂಧ ತಮ್ಮದೇ ಆದ ಪ್ರಾತ್ಯಕ್ಷಿಗಳ ಸಮೇತ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿ ಯೋಜನೆಗಳ ಜಾರಿಗೆ ಆಗುವ ಖರ್ಚು-ವೆಚ್ಚದ ಬಗ್ಗೆಯೂ ವಿವರಗಳನ್ನು ನೀಡಿದರು.

೫ ಭರವಸೆ ಜಾರಿ
ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡುತ್ತದೆ. ನಾವು ಮಾತು ಕೊಟ್ಟಂತೆ ನಡೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಸಂಬಂಧ ಮುಖ್ಯಮಂತ್ರಿ ಸಿದ್ಧಱಾಮಯ್ಯ ಅವರು ಇಂದು ಅಧಿಕಾರಿಗಳ ಜತೆ ಚರ್ಚೆ ನಡೆಸುವರು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿದ್ದಾರೆ. ಹಾಗಾಗಿ ಯೋಜನೆಗಳನ್ನು ಜಾರಿ ಮಾಡೇ ಮಾಡುತ್ತೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಶಿವಕುಮಾರ್ ಹೇಳಿದರು.ನಮ್ಮದು ಜವಾಬ್ದಾರಿಯುತ ಸರ್ಕಾರ. ಏನೆಲ್ಲಾ ಹೇಳಿದ್ದೇವೋ ಅದನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಇಂದು ಅಧಿಕಾರಿಗಳ ಸಭೆ ನಡೆಸಿ ಸಂಪುಟ ಸಭೆಯಲ್ಲಿ ಮಂಡಿಸಬೇಕಿರುವ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.